ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸಂಭವಿಸಿದೆ.
ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ.
ಈ ಕುಸಿತದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು ಎನ್ನಲಾಗಿದ್ದು, ಆಂಧ್ರಪ್ರದೇಶ ಮೂಲದ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆತನನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.