ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಶುರುವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 13 ಮತ್ತು 14 ರಂದು ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಕ್ಕೆ ಶನಿವಾರ ಕಾಲಿಟ್ಟ ಮುಂಗಾರು ಮಳೆ ಭಾನುವಾರದ ವೇಳೆ ರಾಜ್ಯದ ಬಹುತೇಕ ಅರ್ಧ ಭಾಗಕ್ಕೆ ವ್ಯಾಪಿಸಿದೆ. ಮಡಿಕೇರಿ ಹಾಗೂ ಕಾರವಾರದಲ್ಲಿ ಶನಿವಾರ ರಾಜ್ಯ ಪ್ರವೇಶಿಸಿದ್ದ ಮುಂಗಾರು ಮಳೆ ಭಾನುವಾರ ಶಿವಮೊಗ್ಗ ಜಿಲ್ಲೆ ವ್ಯಾಪಿಸಿದೆ. ಬೆಳಗಾವಿ, ಗದಗ, ಹೊನ್ನಾವರ, ಕಾರವಾರ ಹಾಗೂ ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ.
ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ. ಜೂ. 13 ರಿಂದ 15ರ ವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.