ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಮತ್ತೆ ಅಬ್ಬರಿಸಿದ್ದು, ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಂಜೆ ವೇಳೆಗೆ ಸುರಿದ ಮಳೆಯಿಂದ ಕೆ.ಆರ್. ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನ ಸವಾರರು ಗಂಟೆಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡು ತೊಂದರೆ ಅನುಭವಿಸಿದರು.
ನಗರದಲ್ಲಿ ಟ್ರಾಫಿಕ್ ಅಸ್ತವ್ಯಸ್ತ
ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳ ಸಂಚಾರ ನಿಧಾನಗೊಂಡಿತು. ಕಚೇರಿ ಸಮಯದಲ್ಲಿ ಮಳೆ ಆರಂಭವಾದ ಕಾರಣ ಸಾವಿರಾರು ಉದ್ಯೋಗಿಗಳು ಮತ್ತು ಸಾರ್ವಜನಿಕರು ಮನೆ ತಲುಪಲು ಪರದಾಡಿದರು. ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನಗಳ ವೇಗ ಕುಂಠಿತಗೊಂಡು ಸಂಚಾರ ವ್ಯವಸ್ಥೆ ಮೇಲೆ ಪರಿಣಾಮ ಬೀರಿತು.
ಇದನ್ನೂ ಓದಿ:
7 ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ
ಹವಾಮಾನ ಇಲಾಖೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಇನ್ನೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಸಾರ್ವಜನಿಕರಿಗೆ ಮುನ್ನೆಚ್ಚರಿಕೆ
ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಗತ್ಯವಿಲ್ಲದಿದ್ದರೆ ಪ್ರವಾಸ ಮತ್ತು ದೂರ ಪ್ರಯಾಣವನ್ನು ಮುಂದೂಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆ ವಹಿಸಬೇಕು. ವಾಹನ ಸವಾರರು ನೀರು ನಿಂತಿರುವ ರಸ್ತೆಗಳಲ್ಲಿ ಜಾಗರೂಕತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳು ಪರಿಸ್ಥಿತಿಯನ್ನು ನಿಗಾದಲ್ಲಿಟ್ಟಿವೆ.



