ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಹಾಗೂ ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ. ಅದರಲ್ಲಿಯೂ ಬೆಂಗಳೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ.
ಅಕ್ಟೋಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಿಂದ ಮಧ್ಯಮ ಮಳೆ ಹಾಗೂ ಗುಡುಗು ಕಾಣಿಸಿಕೊಳ್ಳಬಹುದು. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಅಕ್ಟೋಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಸದ್ಯ ಬೆಂಗಳೂರಿನಲ್ಲಿ ಮೂಡಿ ವೆದರ್ ಇದ್ದು, ಬೆಳಗ್ಗೆಯೇ ಆಫೀಸು, ಕಚೇರಿ ಹಾಗೂ ಶಾಲೆಗಳಿಗೆ ಹೋಗಲು ಕಷ್ಟಪಡುತ್ತಿದ್ದಾರೆ.
ಅಕ್ಟೋಬರ್ 23ರಂದು ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. ಅಕ್ಟೋಬರ್ 24ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.



