Sunday, December 21, 2025

ರಾಜಕೀಯ ಲೆಕ್ಕಾಚಾರದಲ್ಲಿ ರಾಜಣ್ಣ ‘ರಾಜಿ’ಯಿಲ್ಲದ ಪಟ್ಟು: ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಹಳೆಯ ನಿಲುವಿಗೆ ಅಂಟಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ತಮ್ಮನ್ನು ಭೇಟಿ ಮಾಡಿದ್ದರೂ, ಸಿಎಂ ಸಿದ್ದರಾಮಯ್ಯ ಅವರ ಮೇಲಿರುವ ತಮ್ಮ ನಿಷ್ಠೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಾನು ಹಿಂದೆ ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಯಾವಾಗಲೂ ಸಿದ್ದರಾಮಯ್ಯ ಅವರ ಪರವೇ ಇರುತ್ತೇನೆ,” ಎಂದು ರಾಜಣ್ಣ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ಪಕ್ಷದ ಅಧ್ಯಕ್ಷರಾಗಿ ನನ್ನನ್ನು ಭೇಟಿ ಮಾಡಿದ್ದರು. ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರೇ ಹೊರತು, ಬೇರೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರು ಹುಡುಕಿಕೊಂಡು ಬಂದಿದ್ದರಲ್ಲಿ ವಿಶೇಷವೇನಿಲ್ಲ,” ಎಂದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡುತ್ತಾ, “ಸಿದ್ದರಾಮಯ್ಯ ಅವರೇ ತಾವೂ ಐದು ವರ್ಷ ಸಿಎಂ ಆಗಿ ಇರುತ್ತೇನೆ ಎಂದು ಹೇಳಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೋ ಅಲ್ಲಿಯವರೆಗೆ ನಾನು ಕಾಯುತ್ತೇನೆ. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ನಡೆದ ಊಟದ ಕೂಟ ಕೇವಲ ಸೌಜನ್ಯದ್ದಾಗಿತ್ತು,” ಎಂದು ಸ್ಪಷ್ಟನೆ ನೀಡಿದ್ದಾರೆ.

error: Content is protected !!