November 25, 2026
Wednesday, November 25, 2026
spot_img

ಕಲಬುರಗಿಗೆ ಬಂದಿಳಿದ ರಾಜನಾಥ್ ಸಿಂಗ್: ಬಿಜೆಪಿಯ ‘ಲೋಕತಂತ್ರ ಬಚಾವೋ’ ಪಾದಯಾತ್ರೆಯಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ’ ಪಾದಯಾತ್ರೆ ಹಾಗೂ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಲಬುರಗಿಗೆ ಆಗಮಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ದೇಶದಲ್ಲಿ ಕಾಂಗ್ರೆಸ್ ಪಕ್ಷ ಅರಾಜಕತೆಯ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಬೇರುಸಹಿತ ಕಿತ್ತೊಗೆಯಲು ಬಿಜೆಪಿಯು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಪ್ರಭುತ್ವ ಉಳಿಸಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಕಲಬುರಗಿಯಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಮತ್ತು ಸಮಾವೇಶದಲ್ಲಿ ಹಿರಿಯ ನಾಯಕರಾದ ರಾಜನಾಥ್ ಸಿಂಗ್ ಅವರು ಪಾಲ್ಗೊಳ್ಳುತ್ತಿರುವುದು ಪಕ್ಷಕ್ಕೆ ದೊಡ್ಡ ಬಲ ತಂದಿದೆ” ಎಂದು ತಿಳಿಸಿದರು.

ಪ್ರಿಯಾಂಕ್ ಖರ್ಗೆ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ


ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ, “ಪ್ರಿಯಾಂಕ್ ಖರ್ಗೆ ಅವರು ಸಚಿವರಾದಾಗಿನಿಂದ ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗೂಂಡಾಗಿರಿ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಅವರು ತಮ್ಮ ಇಲಾಖೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬೇರೆಲ್ಲಾ ವಿಚಾರಗಳ ಬಗ್ಗೆ ಮಾತನಾಡುತ್ತಾರೆ” ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸದ ಹೇಳಿಕೆಗಳನ್ನು ಟೀಕಿಸಿದ ವಿಜಯೇಂದ್ರ, “ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋದಾಗಲೆಲ್ಲಾ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ದೇಶಕ್ಕೆ ಅವಮಾನ ಮಾಡುತ್ತಿದ್ದಾರೆ. ಆದರೆ, ಅವರ ಈ ಪ್ರಯತ್ನದಲ್ಲಿ ಅವರಿಗೆ ಎಂದಿಗೂ ಯಶಸ್ಸು ಸಿಗುವುದಿಲ್ಲ. ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮತ್ತೊಮ್ಮೆ ಬಯಸುತ್ತಿದ್ದಾರೆ” ಎಂದರು.

ಇದನ್ನೂ ಓದಿ:

ಅಭಿಯಾನದ ಹಿನ್ನೆಲೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಮಾರ್ಗದರ್ಶನದಲ್ಲಿ ಅಕ್ಟೋಬರ್ ಅಂತ್ಯ ಮತ್ತು ನವೆಂಬರ್‌ನಲ್ಲಿ ದೇಶಾದ್ಯಂತ ಎರಡು ಹಂತಗಳಲ್ಲಿ ಈ ಅಭಿಯಾನ ನಡೆಯುತ್ತಿದೆ. ನವೆಂಬರ್ 11ರಂದು ಆರಂಭವಾಗಿರುವ ಎರಡನೇ ಹಂತದ ಅಭಿಯಾನವು ನವೆಂಬರ್ 30ರವರೆಗೆ ಮುಂದುವರಿಯಲಿದ್ದು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹಾಗೂ ಸಾಂವಿಧಾನಿಕ ಪ್ರಕ್ರಿಯೆಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಈ ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ.

Must Read

Skip to toolbar