ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾರ್ಲಿಮೆಂಟ್‌ನ ಮುಂಗಾರು ಜಂಟಿ ಅಧಿವೇಶನದ ಮೊದಲ ದಿನವೇ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ದೇಶಾದ್ಯಂತ ಸೃಷ್ಟಿಯಾಗಿರುವ ನೀಟ್ (NEET) ಪರೀಕ್ಷಾ ಹಗರಣ ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿಷಯಗಳು ಮೇಲ್ಮನೆಯಲ್ಲಿ ಭಾರಿ ಚರ್ಚೆಗೆ ಕಾರಣವಾದವು. ಪ್ರತಿಪಕ್ಷಗಳ ತೀವ್ರ ಗದ್ದಲದಿಂದಾಗಿ ಕಲಾಪವನ್ನು ಮಧ್ಯಾಹ್ನ 12:30ರವರೆಗೆ ಮುಂದೂಡಬೇಕಾಯಿತು.
ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಗಂಭೀರ ವಿದ್ಯಮಾನಗಳನ್ನು ಪ್ರಸ್ತಾಪಿಸಿ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ಜಂತರ್ ಮಂತರ್‌ನಲ್ಲಿ ನ್ಯಾಯಸಮ್ಮತ ಹಕ್ಕುಗಳಿಗಾಗಿ ‘ಚಲೋ ಸಂಸತ್’ ರ‍್ಯಾಲಿ ನಡೆಸುತ್ತಿದ್ದ ನಿರಪರಾಧಿ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ದೆಹಲಿ ಪೊಲೀಸರು ನಡೆಸಿದ ಬಲಪ್ರಯೋಗ ಹಾಗೂ ಲಾಠಿ ಪ್ರಹಾರವನ್ನು ಅವರು ತೀವ್ರವಾಗಿ ಖಂಡಿಸಿದರು. ತಮ್ನ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುವ ಸಾರ್ವಜನಿಕರ ಧ್ವನಿಯನ್ನು ಅಡಗಿಸಲು ಸರ್ಕಾರವು ಪೋಲಿಸ್ ಬಲವನ್ನು ಬಳಸುತ್ತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆಕ್ರೋಶ ಹೊರಹಾಕಿದರು.
ಪ್ರತಿಪಕ್ಷಗಳ ಪಟ್ಟು
ಖರ್ಗೆ ಅವರ ಈ ಆರೋಪಗಳಿಗೆ ಆಡಳಿತಾರೂಢ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದೇ ವೇಳೆ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಹಾಗೂ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಸ್ಥಿತಿಗತಿಯ ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸೇರಿದಂತೆ ಹಲವು ಒಕ್ಕೂಟದ ನಾಯಕರು ವೆಲ್‌ಗೆ ಧಾವಿಸಿ ಪ್ರತಿಭಟಿಸಿದರು.



