ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಮೇಶ್ ಜಾರಕಿಹೊಳಿ ರಾಜ್ಯ ಸರ್ಕಾರಕ್ಕೆ ಫೆ 9 ರಂದು ಪತ್ರ ಬರೆದಿದ್ದು, ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗೂ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದುಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಸಿಎಂ, ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ. ಸಿಡಿಯನ್ನು ಎಲ್ಲೆಲ್ಲಿ ತಯಾರಿಸಲಾಗಿದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲು ಎಸ್ಐಟಿ ರಚಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.