ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಗೆಲುವು ಸಾಧಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ಇಲ್ಲಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಕಾನೂನು ಹೋರಾಟಕ್ಕೆ ತೆರೆ ಬಿದ್ದಂತಾಗಿದೆ.
ಈ ಹಿಂದೆ ಮತ ಎಣಿಕೆಯಲ್ಲಿ 201 ಮತಗಳಿಂದ ಗೆಲುವು ಸಾಧಿಸಿದ್ದ ರಾಜೇಗೌಡ ಅವರು ಈ ಬಾರಿ ಮರು ಮತ ಎಣಿಕೆಯಲ್ಲಿ 203 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಮೂಲಕ ಎರಡು ಹೆಚ್ಚುವರಿ ಮತಗಳನ್ನು ಪಡೆದುಕೊಂಡಿದ್ದಾರೆ.
ಚುನಾವಣೆಯಲ್ಲಿ ಒಟ್ಟು 1,822 ಅಂಚೆ ಮತಗಳು ಚಲಾವಣೆಯಾಗಿದ್ದವು. ಎಣಿಕೆ ವೇಳೆ 279 ಮತಗಳು ತಿರಸ್ಕೃತಗೊಂಡಿದ್ದವು. ಈ ಸಂಬಂಧ ಮರು ಮತ ಎಣಿಕೆಗೆ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಪಟ್ಟು ಹಿಡಿದಿದ್ದರು. ಆದರೆ ಚುನಾವಣಾಧಿಕಾರಿಗಳು ಮರು ಎಣಿಕೆಗೆ ಅವಕಾಶ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಮರು ಮತ ಎಣಿಕೆ ಮಾಡುವಂತೆ ಆದೇಶಿಸಿತ್ತು.
ಈ ಆದೇಶದ ಅನ್ವಯವೇ ಇಂದು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಅಂತಿಮವಾಗಿ ರಾಜೇಗೌಡ ಅವರ ಗೆಲುವು ಸಾಧಿಸಿದ್ದಾರೆ.



