ಕೆಆರ್‌ಎಸ್‌ ಡ್ಯಾಮ್‌ ಬಳಿ ಮನರಂಜನಾ ಪಾರ್ಕ್‌, ಕಾವೇರಿ ಆರತಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

 ಕೆಆರ್​ಎಸ್ ಡ್ಯಾಂ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ಕಾಮಗಾರಿ ಮತ್ತು ಕಾವೇರಿ ಆರತಿ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್, ಸಿಎಂ.ಜೋಷಿ ಅವರಿದ್ದ ಪೀಠ ಕರ್ನಾಟಕ ಸರ್ಕಾರಕ್ಕೆ ಮತ್ತು ಕಾವೇರಿ ನೀರಾವರಿ ನಿಗಮಕ್ಕೆ ನೋಟಿಸ್ ನೀಡಿ ವಿವರಣೆ ಕೋರಿದೆ. ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಡ್ಯಾಮ್ ಬಳಿ 120 ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಅದರ ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೊ ಸಲ್ಲಿಕೆ ಮಾಡಲಾಗಿದೆ.

ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ.

ಕಾಮಗಾರಿಗೆ ಅಗೆಯುವುದರಿಂದ ಡ್ಯಾಂಗೆ ಹಾನಿಯಾಗುವುದಿಲ್ಲವೇ? ಜಲಾಶಯದ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರವನ್ನು ಹಾಗೂ ಕಾವೇರಿ ನೀರಾವರಿ ನಿಗಮವನ್ನು ಹೈಕೋರ್ಟ್ ಪ್ರಶ್ನಿಸಿದೆ. ಅಲ್ಲದೆ, 2 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!