September 17, 2026
Thursday, September 17, 2026
spot_img

1,400 ಸರ್ಕಾರಿ ಹುದ್ದೆಗಳಿಗೆ ಶೀಘ್ರ ನೇಮಕಾತಿ: 80ನೇ ಸ್ವಾತಂತ್ರ್ಯೋತ್ಸವದಲ್ಲಿ ಖಂಡ್ರೆ ಘೋಷಣೆ

ಹೊಸದಿಗಂತ ವರದಿ ಬೀದರ್:

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಪೊಲೀಸ್, ಅರಣ್ಯ, ಅಗ್ನಿಶಾಮಕ ದಳ, ಎನ್‌ಸಿಸಿ, ಸ್ಕೌಟ್ಸ್‌-ಗೈಡ್ಸ್ ಸೇರಿದಂತೆ ಸುಮಾರು 12 ತುಕಡಿಗಳು ಪಥಸಂಚಲನ ನಡೆಸಿ ಗೌರವ ಸಲ್ಲಿಸಿದವು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಣೆ

ಸ್ವಾತಂತ್ರ್ಯಕ್ಕಾಗಿ ಸತ್ಯ, ಶಾಂತಿ ಮತ್ತು ಅಹಿಂಸೆಯ ಮಾರ್ಗದಲ್ಲಿ ಹೋರಾಡಿದವರ ಕೊಡುಗೆ ದೇಶಕ್ಕೆ ಮಾದರಿಯಾಗಿದೆ. ಅವರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಈಶ್ವರ್ ಖಂಡ್ರೆ ಹೇಳಿದರು.

ಅನುಭವ ಮಂಟಪಕ್ಕೆ 750 ಕೋಟಿ ರೂ ಯೋಜನೆ

ಬೀದರ್‌ನ ಐತಿಹಾಸಿಕ ಅನುಭವ ಮಂಟಪವನ್ನು ಸುಮಾರು 750 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂಬರುವ ಬಸವ ಜಯಂತಿಯೊಳಗೆ ಲೋಕಾರ್ಪಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ:

ಪಂಚಾಯತ್ ರಾಜ್ ಇಲಾಖೆಯಲ್ಲಿ 1,400 ಹುದ್ದೆ ಭರ್ತಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 1,400 ಹುದ್ದೆಗಳ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಈಶ್ವರ್ ಖಂಡ್ರೆ ಘೋಷಿಸಿದರು. ಇತ್ತೀಚೆಗೆ 76 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗಿದ್ದು, 80 ಗ್ರೇಡ್-1 ಕಾರ್ಯದರ್ಶಿಗಳಿಗೆ ಮುಂಬಡ್ತಿ ನೀಡಲಾಗಿದೆ ಎಂದರು.

ಬೆಳೆ ಹಾನಿಗೆ ಪರಿಹಾರ; ಹಸಿರು ಬೀದರ್‌ಗೆ ಒತ್ತು

ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಹೆಸರು, ಉದ್ದು ಸೇರಿದಂತೆ ಹಲವು ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 13.8 ಲಕ್ಷ ಸಸಿಗಳನ್ನು ನೆಡಲಾಗಿದೆ. ಆರು ಹೊಸ ವೃಕ್ಷ ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ಪರಿಸರ ಸಂರಕ್ಷಣೆಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಡಾ. ಶೈಲೇಂದ್ರ ಬೆಲ್ದಾಳೆ, ಎಂಎಲ್‌ಸಿ ಭೀಮರಾವ್ ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ್ ಬದೋಲೆ, ಎಸ್‌ಪಿ ಪ್ರದೀಪ್ ಗುಂಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !