August 13, 2026
Thursday, August 13, 2026
spot_img

‘ರೆಡ್ ಅಲರ್ಟ್’ ರಣಕಹಳೆ: ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಋತ್ಯ ಮುಂಗಾರು ಕೇರಳಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಕಾಣಿಸಿಕೊಂಡಿದೆ.

ನಿರಂತರ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದು, ಮರಗಳು ಉರುಳಿ ಬಿದ್ದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಮನೆಗಳಿಗೆ ಹಾನಿಯಾಗಿರುವ ವರದಿಗಳು ಲಭ್ಯವಾಗಿವೆ.

ಭಾರೀ ಮಳೆಗೆ ಯುವಕ ಬಲಿ

ತ್ರಿಶೂರ್ ಜಿಲ್ಲೆಯ ಮನಲೂರು ಭಾಗದಲ್ಲಿ ತಾತ್ಕಾಲಿಕ ಶೆಡ್ ಮೇಲೆ ಮರ ಬಿದ್ದ ಪರಿಣಾಮ 29 ವರ್ಷದ ಯುವಕ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಪ್ರವಾಸಿ ತಾಣಗಳಿಗೆ ನಿರ್ಬಂಧ

ಭಾರೀ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ವಯನಾಡು, ಕೋಝಿಕೋಡ್ ಮತ್ತು ಕಾಸರಗೋಡು ಜಿಲ್ಲೆಗಳ ಟ್ರೆಕ್ಕಿಂಗ್ ಕೇಂದ್ರಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಸಂಚಾರ ಹಾಗೂ ಕಲ್ಲುಗಣಿ ಚಟುವಟಿಕೆಗಳ ಮೇಲೂ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ:

ಶಿಕ್ಷಣ ಸಂಸ್ಥೆಗಳಿಗೆ ರಜೆ

ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಶಾಲೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಮಾತ್ರ ಯಥಾಸ್ಥಿತಿಯಲ್ಲಿ ನಡೆಯಲಿವೆ.

ಮುಂದಿನ ನಾಲ್ಕು ದಿನ ಮಳೆ ಮುಂದುವರಿಕೆ

ಉತ್ತರ ಕೇರಳದ ಮೇಲಿನ ವಾಯುಭಾರ ಕುಸಿತದ ಪರಿಣಾಮ ಜೂನ್ 9ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು-ಮಿಂಚು ಹಾಗೂ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಕೇರಳ, ಕರ್ನಾಟಕ ಹಾಗೂ ಲಕ್ಷದ್ವೀಪ ಕರಾವಳಿ ಭಾಗಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜೂನ್ 9ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !