ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಭಾರೀ ಮಳೆಯಾಗುತ್ತಿದ್ದು, ಮುಂದಿನ ಆರು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗೆ ರೆಡ್ ಹಾಗೂ ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ ಎರಡು ದಿನ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ರೆಡ್ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ 15ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇರುವುದರಿಂದ ಆರೆಂಜ್ ಅಲರ್ಟ್‌ನ ಘೋಷಣೆ ಮಾಡಲಾಗಿದೆ. ಜುಲೈ 8ರಿಂದ 10ರ ವರೆಗೆ ಮೂರು ದಿನ ಮಲೆನಾಡು ಮತ್ತು ಕರಾವಳಿಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಸೂಚನೆ ನೀಡಲಾಗಿದೆ. ಉಳಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಜುಲೈ 8ರಿಂದ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜುಲೈ 9ರಿಂದ ಮಳೆ ಪ್ರಮಾಣ ಇನ್ನಷ್ಟು ತೀವ್ರಗೊಳ್ಳಲಿದೆ. ಒಟ್ಟಾರೆ ಜುಲೈ 12 ವರೆಗೆ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.