April 9, 2026
Thursday, April 9, 2026
spot_img

ಎನ್‌ಒಸಿ ನೀಡಿಕೆ ಕಾಲಮಿತಿ ಕಡಿಮೆ ಮಾಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯಲ್ಲಿ ಸಿಎಂ ಮಾತನಾಡಿದ್ದು, ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.

ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !