ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ವರದಿ, ಮಡಿಕೇರಿ:
ಸರ್ಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇರುವ ಕಾರಣ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ವಿಷಯ ಪ್ರಸ್ತಾಪಿಸಿ,ಕೊಡಗು, ಪುತ್ತೂರು, ಸುಳ್ಯ ಮತ್ತು ರಾಜ್ಯದ ಇತರೆಡೆ ವಾಸವಾಗಿರುವ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಪ್ರಾರಂಭಿಸುವ ಅವಶ್ಯಕತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ, ಸರ್ಕಾರ ಯಾವ ಕಾಲಮಿತಿಯೊಳಗೆ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಪ್ರಾರಂಭಿಸುವ ಕುರಿತು ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವುದು ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ ನಾರಾಯಣ ಅವರು, ರಾಜ್ಯದಲ್ಲಿ ಕೋವಿಡ್-19 ಪ್ರಸರಣೆಯಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೂಢೀಕರಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸರ್ಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.