ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ: ಕೊಡಗು ಜೆಡಿಎಸ್ ಕರೆ

ಹೊಸದಿಗಂತ ವರದಿ, ಮಡಿಕೇರಿ:
ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ವತಿಯಿಂದ ಫೆಬ್ರವರಿ ತಿಂಗಳಿನಲ್ಲಿ ಮಡಿಕೇರಿಯಲ್ಲಿ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಮತದಾರರು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕೆಂದು ಕರೆ ನೀಡಿದ್ದಾರೆ.
ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ನಡೆದ ಜೆಡಿಎಸ್ ಅಲ್ಪಸಂಖ್ಯಾತರ ಬೃಹತ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಪರ ಕಾಳಜಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮರೆತಿರುವ ರಾಷ್ಟ್ರೀಯ ಪಕ್ಷಗಳು ಆತಂಕ ಮೂಡಿಸಿ ಮತಗಳಿಸುವ ತಂತ್ರಗಾರಿಕೆಯಲ್ಲಿ ತೊಡಗಿವೆ ಎಂದು ಟೀಕಿಸಿದರು.
ಭಯ ಹುಟ್ಟಿಸಿ ಮತ ಗಳಿಕೆ:
ಬಿಜೆಪಿಯ ಹೆಸರು ಹೇಳಿ ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸಿ ಮತ ಗಳಿಸುವ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದ್ದರೆ, ಕೋಮು ದ್ವೇಷವನ್ನು ಹುಟ್ಟು ಹಾಕಿ ಸಮಾಜದಲ್ಲಿ ಒಡಕು ಮೂಡಿಸುವ ಕ್ಷುಲ್ಲಕ ರಾಜಕೀಯವನ್ನು ಬಿಜೆಪಿ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಆತಂಕ, ಅಶಾಂತಿ ಸೃಷ್ಟಿಯಲ್ಲೇ ಕಾಲಹರಣ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳು ಜನರ ಬೇಕು ಬೇಡಗಳ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ನೊಂದವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಕೇವಲ ಮತಗಳಿಸುವುದಷ್ಟೇ ಇವುಗಳ ಉದ್ದೇಶವಾಗಿದೆ. ಆದರೆ ಜೆಡಿಎಸ್ ಪಕ್ಷ ಈ ನಾಡು ಮತ್ತು ನಾಡಿನ ಜನರ, ರೈತರ ಏಳಿಗೆಗಾಗಿ ಶ್ರಮಿಸುತ್ತಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಮದ್ಯ ಮಾರಾಟ ಮತ್ತು ಲಾಟರಿ ನಿಷೇಧದ ಮೂಲಕ ಬಡವರ ಹಾಗೂ ಬಡಮಹಿಳೆಯರ ಕಣ್ಣೀರನ್ನು ಒರೆಸುವ ಕೆಲಸ ಮಾಡಿದ್ದಾರೆ. ರಾಜ್ಯದ ರೈತರ ಸಾಲಮನ್ನಾ ಮಾಡಿ ರೈತಪರ ನಾಯಕ ಎಂದು ಕೀರ್ತಿ ಗಳಿಸಿದ್ದಾರೆ. ಇದೇ ಕಾರಣಕ್ಕೆ ಕುಮಾರಣ್ಣ ಹೋದ ಊರುಗಳಲ್ಲೆಲ್ಲ ಜನಸ್ತೋಮವೇ ಹರಿದು ಬರುತ್ತಿದೆ. ಜನರು ಈ ಬಾರಿ ಜೆಡಿಎಸ್ ಪರ ಇದ್ದು, ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿರುವ ಅಲ್ಪಸಂಖ್ಯಾತರು ಕೂಡಾ ನಮಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಗಣೇಶ್ ಹೇಳಿದರು.
ಬರುವ ಫೆಬ್ರವರಿ ತಿಂಗಳಿನಲ್ಲಿ ಮಡಿಕೇರಿಯಲ್ಲಿ ಜೆಡಿಎಸ್ ವತಿಯಿಂದ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ನಡೆಯಲಿದ್ದು, ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್ ಖಾನ್, ಎರಡು ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿಯನ್ನು ಮರೆತು ಜಾತಿ ರಾಜಕರಣ ಮಾಡುತ್ತಿವೆ, ಕೋಮುವಾದದ ಮೂಲಕ ಅಶಾಂತಿ ಮೂಡಿಸುತ್ತಿವೆ ಎಂದು ಟೀಕಿಸಿದರು.
ಬಡವರ ಮತ್ತು ಶೋಷಿತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅಭಿವೃದ್ದಿಯನ್ನೇ ಗುರಿಯಾಗಿಸಿಕೊಂಡಿರುವ ಜೆಡಿಎಸ್’ಗೆ ಅಲ್ಪಸಂಖ್ಯಾತರು ಮತ ಹಾಕುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಮತದಾರರಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ ಎಂದು ದೂರಿದರು.
ಕೊಡಗಿನಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್‍ಗೆ ಮತ ಹಾಕುವುದರಿಂದ ಬಿಜೆಪಿ ಗೆಲುವು ಸಾಧಿಸುತ್ತಿದೆ ಎಂದು ಅಭಿಪ್ರಾಯಪಟ್ಟ ಅವರು, ಅಲ್ಪಸಂಖ್ಯಾತರ ಸಂಪೂರ್ಣ ಮತಗಳು ಜೆಡಿಎಸ್‍ಗೆ ಸಿಕ್ಕರೆ ಮಾತ್ರ ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಹೇಳಿದರು.
ಜೆಡಿಎಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಝಕ್ರಿಯ, ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಆಲಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾವತಿ, ನಗರಸಭೆ ಸದಸ್ಯ ಮುಸ್ತಫ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಯೂಸೂಪ್ ಕೊಂಡಂಗೇರಿ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!