ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ತ್ರಿಷಾ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿ ಅರೆಸ್ಟ್ ಆಗಿದ್ದ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ರನ್ನು ಇಂದು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ಮಾತನಾಡುವ ವೇಳೆ ನಟಿ ತ್ರಿಷಾ ಬಗ್ಗೆ ಅವಹೇಳನಾಕಾರಿ, ದ್ವಂದ್ವಾರ್ಥ ಬರುವಂತಹ ಮಾತುಗಳನ್ನು ಆಡಿದ್ದಾರೆ ಎಂದು ಹೇಳಲಾಗಿತ್ತು. ಈ ಹೇಳಿಕೆಗೆ ತಮಿಳುನಾಡಿನಾದ್ಯಂತ ವಿವಿಧ ರಾಜಕೀಯ ಪಕ್ಷಗಳಿಂದ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತವಾಗಿತ್ತು.
ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ, ತಂಜಾವೂರಿಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಬಯಸುತ್ತಿಲ್ಲ. ಕೇವಲ ವಿಚಾರಣೆ ನಡೆಸಿದ ನಂತರ ಅವರನ್ನು ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಉದ್ದೇಶ ಹೊಂದಿಲ್ಲ, ಕೇವಲ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿತ್ತು.
ಭಾಷಣದಲ್ಲಿ ಏನು ಮಾತನಾಡಿದ್ರು?
ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೇಗೆ ಹಾಕುವುದು ಎಂಬುದು ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಈ ವೇಳೆ ಜನರು ತ್ರಿಷಾ ತ್ರಿಷಾ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದ್ದಾರೆ.
ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ.



