ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರೆಮಿಡಿಸಿವಿರ್(remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ, ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಅವರು ಬೀದರ್ ಜಿಲ್ಲೆಯ ಹುಮ್ನಾಬಾದ್ನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ರೆಮಿಡಿಸ್ವಿರ್ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ ಈ ಔಷಧಿಯ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ. ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ ಎಂದರು.
ಇಂಥ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಚುಚ್ಚುಮದ್ದನ್ನು ಕೃತಕ ಅಭಾವ ಸೃಷ್ಟಿಸಿ ಕಳ್ಳ ಮಾರುಕಟ್ಟೆಯಲ್ಲಿ ದುಬಾರಿ ದರಕ್ಕೆ ಮಾರಾಟ ಮಾಡಿ ದುರ್ಲಾಭ ಪಡೆದರೆ ಕಠಿಣ ಕ್ರಮ ಜರುಗಿಸುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದರು.