October 9, 2026
Friday, October 9, 2026
spot_img

ದಕ್ಷಿಣ ಕನ್ನಡಕ್ಕೆ ‘ಮಂಗಳೂರು ಜಿಲ್ಲೆ’ ಮರುನಾಮಕರಣ: ಜನಾಭಿಪ್ರಾಯ ಸಂಗ್ರಹಿಸಿ ತಿಂಗಳೊಳಗೆ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರು ನಾಮಕರಣಗೊಳಿಸುವಲ್ಲಿ ದಿಟ್ಟ ಹೆಜ್ಜೆ ಇಡಲಾಗಿದ್ದು, ಒಂದು ತಿಂಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ನಿರ್ಣಯಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈವರೆಗಿನ ಎಲ್ಲಾ ನೀತಿಗಳಿಗಿಂತ ಭಿನ್ನವಾದ ನೀತಿ ಇದಾಗಲಿದೆ. ಹೂಡಿಕೆದಾರರಿಗೆ ಹೆಚ್ಚಿನ ಶಕ್ತಿ ಹಾಗೂ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲಾಗುವುದು.

ಮಲೆನಾಡು ಒಳಗೊಂಡಂತೆ ಕರಾವಳಿ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಲಾಗುವುದು. ಅಲ್ಲದೆ ಅನೇಕ ಪ್ರೋತ್ಸಾಹಕಗಳನ್ನು ನೀಡಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಮೀನುಗಾರಿಕಾ ವಿಶ್ವವಿದ್ಯಾಲಯ:

ಮೀನುಗಾರಿಕೆಗೆ ಸಂಬಂಧಿಸಿದಂತೆ ಫಿಶರೀಸ್, ಬ್ಲೂ ಎಕಾನಮಿ ಯೂನಿವರ್ಸಿಟಿಯನ್ನು ಸ್ಥಾಪಿಸಲಾಗುವುದು. ಪ್ರಸ್ತುತ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶವನ್ನು 60 ರಿಂದ 200 ಸೀಟುಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ಭಾಗದಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗೆ ಬೇಡಿಕೆ ಬಂದಿದೆ ಎಂದು ತಿಳಿಸಿದ ಅವರು ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 549 ಕೋಟಿ ರೂ. ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

Must Read