November 24, 2026
Tuesday, November 24, 2026
spot_img

ರೇಣುಕಾಸ್ವಾಮಿ ಕೊ*ಲೆ ಪ್ರಕರಣ: ಮತ್ತೊಮ್ಮೆ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡ ಇದೀಗ ಮತ್ತೊಮ್ಮೆ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್‌ ಜಾಮೀನು ರದ್ದುಗೊಳಿಸಿದ ಬಳಿಕ ಎರಡನೇ ಬಾರಿಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಸಿಆರ್‌ಪಿಸಿ ಸೆಕ್ಷನ್‌ 439ರ ಅಡಿಯಲ್ಲಿ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿ ವಿಶ್ವಜೀತ್‌ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ.

ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅಲ್ಲಿಂದಲೇ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಪ್ರಕರಣದ ವಿಚಾರಣೆ ವೇಳೆ ಪ್ರಮುಖ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿಯುತ್ತಿದ್ದಾರೆ. ಅಲ್ಲದೆ, ತಮ್ಮ ಕಕ್ಷಿದಾರರ ವಿರುದ್ಧ ವಿಚಾರಣೆ ವೇಳೆ ಯಾವುದೇ ಆರೋಪ ಸಾಬೀತಾಗಿಲ್ಲ. ಹೀಗಾಗಿ ಸೂಕ್ತ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಸೆಪ್ಟೆಂಬರ್‌ 26ರಂದು ಬೆಂಗಳೂರಿನ 59ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ವಕೀಲ ನಾರಾಯಣಸ್ವಾಮಿ ಅವರ ಮೂಲಕ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ.

ಹೀಗಾಗಿ ಪವಿತ್ರಾ ಗೌಡ ಅವರಿಗೆ ಜಾಮೀನು ದೊರೆಯಲಿದೆಯೇ ಎಂಬುದು ಇಂದಿನ ಹೈಕೋರ್ಟ್‌ ವಿಚಾರಣೆಯಲ್ಲಿ ನಿರ್ಧಾರವಾಗಲಿದೆ.

Must Read