ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೈನ್ ಲಿಂಕ್ ಕಟ್ಟಾಗಿ ಕೆಳಕ್ಕೆ ಬಿದ್ದಿರುವ ತುಂಗಭದ್ರಾ ಜಲಾಶಯದ ಗೇಟ್ ನಂ.19ಕ್ಕೆ ಹೊಸ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯ ಬುಧವಾರದಿಂದಲೇ ಆರಂಭವಾಗಲಿದೆ.
ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯುಸೆಕ್ ನೀರು ಹೋಗುತ್ತಿದೆ.
ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ. ಆ.17ರೊಳಗೆ ಕಾರ್ಯ ಮುಗಿಯುವ ನಿರೀಕ್ಷೆ ಇದೆ.