ರೈತರ ಆತ್ಮಹತ್ಯೆ ಪ್ರಕರಣಗಳ ಬಾಕಿ ಪರಿಹಾರ ಶೀಘ್ರವೇ ಬಗೆಹರಿಸಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸಭೆ ನಡೆಸಿದರು.

ಈ ವೇಳೆ ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು, ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದರು.

ಇದೇ ವೇಳೆ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಸಿಎಂ ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್‌ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!