ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿದರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶಗಳಿಂದ ಬಿಜೆಪಿ ಹಾಗೂ ಎನ್ಡಿಎ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಉಳಿದ ಎರಡು ಕ್ಷೇತ್ರಗಳ ಫಲಿತಾಂಶವೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ NDA ಪರವಾಗಿಯೇ ಹೊರ ಬರುವ ನಿರೀಕ್ಷೆ ಇದೆ.
908 ಮತಗಳ ಅಂತರದಲ್ಲಿ ರಂಗನಾಥ್ ಗೆಲುವು
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್ ಅವರು ಒಟ್ಟು 10,810 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 9,902 ಮತಗಳನ್ನು ಗಳಿಸಿದರು. ಈ ಮೂಲಕ ರಂಗನಾಥ್ 908 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು.
ಮೈತ್ರಿ ಕಾರ್ಯಕರ್ತರಿಂದ ವಿಜಯೋತ್ಸವ
ರಂಗನಾಥ್ ಗೆಲುವಿನ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ರಾಮನಗರದ ಐಜೂರು ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ಇದನ್ನೂ ಓದಿ:
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಿಜೆಪಿಗೆ ಜಯ
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಸೋಲು ಕಂಡಿದ್ದಾರೆ.
ಇನ್ನು ಆಗ್ನೇಯ ಪದವೀಧರರ ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿ ಕೆ.ಎಂ. ಸುರೇಶ್ 6,296 ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ 5,174 ಮತ ಪಡೆದು ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 14,001 ಮತಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಂಕನೂರ 6459 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4394 ಮತಗಳನ್ನು ಪಡೆದುಕೊಂಡಿರುತ್ತಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಸಂಕನೂರ ಎಸ್.ವಿ ಅವರು 2206 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಒಟ್ಟಿನಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಫಲಿತಾಂಶ ಮೈತ್ರಿಕೂಟ ಮತ್ತು ಬಿಜೆಪಿಗೆ ಬಲ ನೀಡಿದೆ.



