April 6, 2026
Monday, April 6, 2026
spot_img

ರಿವೇಂಜ್ ವಾರ್ | 34 ಮಂದಿ ಸಾವಿಗೆ ಪ್ರತೀಕಾರ: ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿ ಮಳೆ ಸುರಿಸಿದ ಇರಾನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ನ ವಿವಿಧ ಪ್ರದೇಶಗಳ ಮೇಲೆ ನಡೆಸಿದ ದಾಳಿಯಲ್ಲಿ 34 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಇರಾನ್ ತೀವ್ರ ಪ್ರತಿದಾಳಿ ನಡೆಸಿದೆ.

ಉತ್ತರ ಇಸ್ರೇಲ್‌ನ ಹಲವು ಭಾಗಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದ್ದು, ಹೈಫಾ ನಗರ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿಯಾಗಿದೆ. ಹೈಫಾದಲ್ಲಿ ಬಹುಮಹಡಿ ಕಟ್ಟಡಗಳು ಹಾನಿಗೊಳಗಾಗಿದ್ದು, ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವವರ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮಾಹಿತಿಗಳ ಪ್ರಕಾರ, ಹೈಫಾದ ನಿವಾಸಿ ಕಟ್ಟಡವೊಂದಕ್ಕೆ ಕ್ಷಿಪಣಿ ನೇರವಾಗಿ ಬಡಿದ ಪರಿಣಾಮ ಭಾರೀ ಹಾನಿ ಸಂಭವಿಸಿದೆ. ಕೆಲವು ಕಡೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಕುಸಿತದ ಭೀತಿ ವ್ಯಕ್ತವಾಗಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ಇದರ ನಡುವೆ, ದಕ್ಷಿಣ ಇಸ್ರೇಲ್‌ನ ಡಿಮೋನಾ ಪ್ರದೇಶದ ಸಮೀಪದ ಪೆಟ್ರೋಕೆಮಿಕಲ್ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಇರಾನ್ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಕುವೈತ್‌ನ ಬುಬಿಯಾನ್ ದ್ವೀಪದಲ್ಲಿರುವ ಅಮೆರಿಕ ಸೇನಾ ನೆಲೆಗಳತ್ತ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿಕೆ ನೀಡಿದೆ. ಗಲ್ಫ್ ಪ್ರದೇಶದಲ್ಲೂ ಉದ್ವಿಗ್ನತೆ ಹೆಚ್ಚಾಗಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಪೆಟ್ರೋಕೆಮಿಕಲ್ ಸ್ಥಾವರದ ಬಳಿ ಬೆಂಕಿ ಕಾಣಿಸಿಕೊಂಡ ನಂತರ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದೇ ವೇಳೆ, ಕತಾರ್ ಮತ್ತು ಟರ್ಕಿ ಮಧ್ಯಸ್ಥಿಕೆ ಪ್ರಯತ್ನಗಳನ್ನು ಇರಾನ್ ತಿರಸ್ಕರಿಸಿದ್ದು, “ಈ ಹಂತದಲ್ಲಿ ಯಾವುದೇ ಮಧ್ಯಸ್ಥಿಕೆ ಅಗತ್ಯವಿಲ್ಲ” ಎಂದು ಸ್ಪಷ್ಟ ಸಂದೇಶ ನೀಡಿದೆ. ಈ ಬೆಳವಣಿಗೆಗಳು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಗಂಭೀರ ಹಂತಕ್ಕೆ ತಳ್ಳಿದ್ದು, ಪರಿಸ್ಥಿತಿ ಯಾವ ದಿಕ್ಕಿಗೆ ಸಾಗಲಿದೆ ಎಂಬುದರ ಮೇಲೆ ಜಾಗತಿಕ ಗಮನ ಕೇಂದ್ರೀಕೃತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !