October 11, 2026
Sunday, October 11, 2026
spot_img

ಪ್ರತಿಭಟನೆ ಹಕ್ಕಿದೆ, ನಿಯಮ ಪಾಲನೆಯೂ ಕಡ್ಡಾಯ: ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಕ್‌ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಳವಡಿಸಲಾಗಿರುವ ಬ್ಯಾರಿಕೇಡ್‌ಗಳನ್ನು ಅಗತ್ಯವಿದ್ದ ಸಂದರ್ಭ ಹೊರತುಪಡಿಸಿ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚಿಸಿದೆ.

‘ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು, ಮೆಟ್ರೋ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು ಹಾಗೂ ಇಂಟರ್ನೆಟ್ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಭಾನುವಾರ ನಡೆದ ವಿಶೇಷ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಸೂಚನೆಗಳನ್ನು ನೀಡಿತು. ಸಾರ್ವಜನಿಕರು ತಮ್ಮ ವೃತ್ತಿಗೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸಲು ಅಡ್ಡಿಪಡಿಸಬಾರದು. ಜನರ ಸಂಚಾರವನ್ನು ಸಹಜ ಸ್ಥಿತಿಗೆ ತರಲು ಪೊಲೀಸರು ಕ್ರಮ ಕೈಗೊಳ್ಳಬೇಕು. ಶಾಂತಿಯುತವಾಗಿ ಸೇರುವವರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆಯಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ಇದನ್ನೂ ಓದಿ:

ಆದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯವಿದ್ದಲ್ಲಿ ಸೂಕ್ತ ನಿರ್ಬಂಧಗಳನ್ನು ವಿಧಿಸಬಹುದು ಎಂದೂ ನ್ಯಾಯಾಲಯ ತಿಳಿಸಿತು. ಪ್ರತಿಭಟನೆ ನಡೆಸುವ ಹಕ್ಕನ್ನು ಒಪ್ಪಿಕೊಂಡ ನ್ಯಾಯಪೀಠ, ಅದನ್ನು ಪೊಲೀಸ್ ಕಾಯ್ದೆಯ ನಿಯಮಗಳಿಗೆ ಅನುಗುಣವಾಗಿ ನಡೆಸಬೇಕು ಎಂದು ಹೇಳಿತು.

ಕೇಂದ್ರ, ದೆಹಲಿ ಪೊಲೀಸರಿಗೆ ನೋಟಿಸ್

ಹಿಂದಿನ ಆದೇಶದ ಬಳಿಕವೂ ರಾಜಧಾನಿಯಲ್ಲಿ ನಿರ್ಬಂಧಗಳು ಮುಂದುವರಿದಿರುವ ವಿಚಾರವಾಗಿ ಸುಪ್ರೀಂಕೋರ್ಟ್ ದೆಹಲಿ ಪೊಲೀಸ್ ಇಲಾಖೆ, ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಮಂಗಳವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ದೆಹಲಿ ಪೊಲೀಸರ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮೆಟ್ರೋ ಮತ್ತು ರೈಲು ಸೇವೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಹಾಗೂ ಇಂಟರ್ನೆಟ್ ಸೇವೆ ಪುನಃಸ್ಥಾಪಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಸಿಜೆಪಿ ಮುಖಂಡರ ಬಿಡುಗಡೆ

ಇದಕ್ಕೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸಹ ಸಂಚಾಲಕ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಆಶುತೋಷ್ ರಂಕಾ ಅವರನ್ನು ಸುಮಾರು 24 ಗಂಟೆಗಳ ವಶದ ಬಳಿಕ ಬಿಡುಗಡೆ ಮಾಡಲಾಗಿತ್ತು. ಮುಂದಿನ ಒಂದು ವರ್ಷದ ಅವಧಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂಬ ಷರತ್ತಿನೊಂದಿಗೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸಾರ್ವಜನಿಕ ಹಿತಾಸಕ್ತಿಯನ್ನು ಬಯಸುವವರು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಭರವಸೆ ನೀಡಬೇಕು ಎಂದು ನ್ಯಾಯಮೂರ್ತಿ ಮೋಹನಾ ವಿಚಾರಣೆಯ ಅಂತ್ಯದಲ್ಲಿ ಹೇಳಿದರು.

Must Read