ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸ ದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಪಾಯವನ್ನು ಎದುರಿಸುತ್ತಿರುವವರನ್ನು ಸ್ಥಳಾಂತರಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಮೂರ್ನಾಡು, ಬಲಮುರಿ ಮತ್ತಿತರೆಡೆ ಭೇಟಿ ನೀಡಿ ನದಿ ನೀರಿನ ಮಟ್ಟ ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಎನ್ಡಿಆರ್ಎಫ್ ತಂಡ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದೆ. ಮುಳುಗಡೆ ಪ್ರದೇಶದ ಕುಟುಂಬವನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಮಳೆಗಾಲದ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಅಪ್ಪಚ್ಚುರಂಜನ್ ಹೇಳಿದರು.
2 ನೇ ಲಸಿಕೆ ನೀಡಲು ಆದ್ಯತೆ: ಜಿಲ್ಲೆಯಲ್ಲಿ ವ್ಯಾಕ್ಸಿನ್ ಗೆ ಬೇಡಿಕೆ ಹೆಚ್ಚಾಗಿದೆ. ಮೊದಲು ಪಡೆದವರ ಅವಧಿ 80 ದಿನ ಕಳೆದು ಹೋಗಿದೆ. ಆದ್ದರಿಂದ 2 ನೇ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನುಡಿದರು.
ಜಿಲ್ಲೆಯಲ್ಲಿ ಈಗಾಗಲೇ 2 ಲಕ್ಷ ಮಂದಿಗೆ ವ್ಯಾಕ್ಸಿನ್ ನೀಡುವ ಮೂಲಕ ಶೇ.45 ರಷ್ಟು ಸಾಧನೆ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ವ್ಯಾಕ್ಸಿನ್ ಕೊರತೆ ಇರುವ ಬಗ್ಗೆ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಎರಡನೇ ಸಲ ಪಡೆಯುವವರಿಗೆ ಮತ್ತು ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕರು ಹೇಳಿದರು.