Tuesday, August 9, 2022

Latest Posts

ಕಾವೇರಿ ನದಿ ಸಂರಕ್ಷಣೆ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ

ಹೊಸ ದಿಗಂತ ವರದಿ, ಮಡಿಕೇರಿ:

ಕಾವೇರಿ ನದಿ ಪಾತ್ರದಲ್ಲಿ ಮನೆ ನಿರ್ಮಿಸಿಕೊಂಡಿರುವ ಸಂಬಂಧ ನಿಯಮಾನುಸಾರ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಅವರು ಸೂಚಿಸಿದರು.
ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಕುರಿತು ವಿಷಯ ಪ್ರಸ್ತಾಪಿಸಿದ ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರು, ಕಾವೇರಿ ನದಿ ಪಾತ್ರದ ಇಕ್ಕೆಲಗಳಲ್ಲಿ ಮನೆ ನಿರ್ಮಿಸುವುದು, ಕೊಳಚೆ ನೀರನ್ನು ಬಿಡುವುದು ಮತ್ತಿತರ ಕಾರ್ಯಗಳು ನಡೆಯುತ್ತಿವೆ. ಆದ್ದರಿಂದ ಕೂಡಲೇ ನದಿ ಪಾತ್ರದಲ್ಲಿ ಸರ್ವೆ ಮಾಡಿ ತಂತಿಬೇಲಿ ಅಳವಡಿಸಬೇಕು ಎಂದು ಸಲಹೆ ಮಾಡಿದರು.
ಈ ಬಗ್ಗೆ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ನದಿ ಪಾತ್ರದ 100 ಮೀ. ವ್ಯಾಪ್ತಿಯಲ್ಲಿ ಮನೆ ಅಥವಾ ಇತರ ಚಟುವಟಿಕೆ ನಡೆಸುವಂತಿಲ್ಲ, ಕಾವೇರಿ ನದಿ ಪಾತ್ರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ.ಇಒಗಳು, ಪ.ಪಂ. ಮುಖ್ಯಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
ಉಚಿತ ವಿದ್ಯುತ್: 10 ಎಚ್.ಪಿ. ಒಳಗಿರುವ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡುವ ನಿಟ್ಟಿನಲ್ಲಿ ಈಗಾಗಲೇ ಇಂಧನ ಸಚಿವರ ಜೊತೆ ಚರ್ಚಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಈ ಕುರಿತು ವಿಷಯ ಪ್ರಸ್ತಾಪಿಸಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ಕಾಫಿ ಬೆಳೆಯುವ ಕೃಷಿಕರ 10 ಎಚ್‍ಪಿ ಒಳಗಿನ ಪಂಪ್‍ಸೆಟ್‍ಗಳಿಗೆ ವಿದ್ಯುತ್ ವಿನಾಯಿತಿ ನೀಡಬೇಕು. ಈಗಾಗಲೇ ಸರ್ಕಾರದ ಗಮನ ಸೆಳೆಯಲಾಗಿದೆ ಎಂದರು.
ಸೌಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆಯೇ ಎಂದು ಮಾಹಿತಿ ಪಡೆದ ಸಂಸದರು, ಬಾಕಿ ಇರುವ ಕಡೆಗಳಲ್ಲಿ ಸೌಭಾಗ್ಯ ಯೋಜನೆಯಡಿ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕ್ ಇಇ ಅಶೋಕ್ ಅವರು ಸೌಭಾಗ್ಯ ಯೋಜನೆಗೆ ಅರಣ್ಯ ಪ್ರದೇಶದಲ್ಲಿ ತೊಡಕಾಗಿದೆ. ಇನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ನರೇಗಾ ಯೋಜನೆಯಡಿ ಕೆರೆಗಳ ಅಭಿವೃದ್ಧಿ, ಕೃಷಿ, ತೋಟಗಾರಿಕೆ ಅಭಿವೃದ್ಧಿ, ಕೃಷಿ ಹೊಂಡ ನಿರ್ಮಾಣ, ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಪ್ರತಾಪ್ ಸಿಂಹ ಸೂಚಿಸಿದರು.
ರಸಗೊಬ್ಬರ ಪೂರೈಕೆ ಸಂಬಂಧಿಸಿದಂತೆ ಮಾಹಿತಿ ಪಡೆದ ಸಂಸದರು, ಜಿಲ್ಲೆಗೆ ಬೇಡಿಕೆ ಇರುವ ರಸಗೊಬ್ಬರ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಈ ಬಗ್ಗೆ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ಸಹಕಾರ ಸಂಘಗಳಲ್ಲಿ ರಸಗೊಬ್ಬರವನ್ನು ಮತ್ತಷ್ಟು ದಾಸ್ತಾನು ಮಾಡಿಕೊಳ್ಳಬೇಕು. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರವನ್ನು ಪೂರೈಸಿಕೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ಮಾಡಿದರು.
ಜಿ.ಪಂ.ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಜಿ.ಪಂ.ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ, ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ಪೌರಾಯುಕ್ತ ರಾಮದಾಸ್, ಐಟಿಡಿಪಿ ಇಲಾಖೆ ಅಧಿಕಾರಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ಡಿವೈಎಸ್‍ಪಿ ಶೈಲೇಂದ್ರ ಕುಮಾರ್ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಮತ್ತಿತರರು ಹಲವು ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss