ಮೈಸೂರಿನಲ್ಲಿ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ (T Narasipura Road) ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ (CM siddaramaiah) ಪರಿಹಾರ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಮೃತಪಟ್ಟವರು ಯಾರೆಲ್ಲ?
ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!