ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ಪರಿಸ್ಥಿತಿ ಹದಗೆಟ್ಟಿದೆ. ನೀರಿನ ಹರಿವು, ನಿರ್ಮಾಣ ಕಾರ್ಯಗಳ ಮಧ್ಯೆ, ಉರುಳಿದ ಮರಗಳು ಮತ್ತು ಕೊಂಬೆಗಳು ನಗರದಾದ್ಯಂತ ಪ್ರಯಾಣಿಕರ ಮೇಲೆ ತೀವ್ರ ಪರಿಣಾಮ ಬೀರಿದೆ.
ಇದರ ಪರಿಣಾಮವಾಗಿ ಸಂಚಾರ ದಟ್ಟಣೆ ಮತ್ತು ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ವಾರಾಂತ್ಯದಲ್ಲಿ ಮಳೆಯಿಂದಾಗಿ ಸಂಚಾರಕ್ಕೆ ಹೆಚ್ಚಿನ ಅಡ್ಡಿಯಾಗಿಲ್ಲದಿದ್ದರೂ, ನಿನ್ನೆ ಮತ್ತು ಇಂದು ಕಚೇರಿ, ಕೆಲಸ ಕಾರ್ಯಗಳಿಗೆ ಹೋಗುವವರಿಗೆ ತೀವ್ರ ತೊಂದರೆಯಾಗಿದೆ.
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ವಾಹನ ಸವಾರರು ಬದಲಿ ರಸ್ತೆ ಬಳಸುವುದು ಒಳಿತು ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಹೊಸೂರು ಮುಖ್ಯರಸ್ತೆ ಮತ್ತು ಹೊರ ವರ್ತುಲ ರಸ್ತೆ ಜಲಾವೃತಗೊಂಡಿದ್ದು, ಪರ್ಯಾಯ ಮಾರ್ಗಗಳ ಬಳಕೆಗೆ ಪೊಲೀಸರು ಸಲಹೆ ನೀಡಿದ್ದಾರೆ. ಬನಶಂಕರಿ ಕಡೆಯಿಂದ ಬರುವ ವಾಹನಗಳನ್ನು ಈಸ್ಟ್ ಎಂಡ್ ಸರ್ಕಲ್ ಬಳಿ ಎಡ ತಿರುವು ಮಾಡಿಸಿ ಸಾಗರ್ ಜಂಕ್ಷನ್ ಗೆ ಬಂದು ಬಲ ತಿರುವು ಮಾಡಿಸಿ ಬನ್ನೇರಘಟ್ಟ ರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗುತ್ತಿದೆ.
ಜಯದೇವ ಜಂಕ್ಷನ್‌ನಲ್ಲಿ ಎಡ ತಿರುವು ಮಾಡಿಸಿ ಬನ್ನೇರುಘಟ್ಟ ಮುಖ್ಯರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗುತ್ತಿದೆ. ಬಿ.ಟಿ.ಎಂ ಲೇಔಟ್ ಒಳಭಾಗದಿಂದ ಬರುವ ವಾಹನಗಳನ್ನು 16ನೇ ಮುಖ್ಯರಸ್ತೆಯಲ್ಲಿ ಎಡ ತಿರುವು ಮಾಡಿಸಿ ತಾವರೆಕೆರೆ ಮುಖ್ಯರಸ್ತೆ ಮೂಲಕ ಡಾ. ಮರಿಗೌಡ ರಸ್ತೆ, ಡೈರಿ ಸರ್ಕಲ್ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪುಟ್ಟೇನಹಳ್ಳಿ ಮುಖ್ಯರಸ್ತೆ ಕಡೆಯಿಂದ ಕೊತ್ತನೂರು ದಿನ್ನೆ ಜಂಕ್ಷನ್ ಕಡೆಗೆ ಹಾಗೂ ಹೊಸಗುಡ್ಡದಹಳ್ಳಿ ಜಂಕ್ಷನ್ ಕಡೆಯಿಂದ ಮೈಸೂರು ರಸ್ತೆ ಟೋಲ್ ಗೇಟ್ ಕಡೆಗೆ ಮಳೆನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.