ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.
ಎರಡು ಭರ್ಜರಿ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.
ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದ ಅವರು 39 ರನ್ ಗಳ ಜೊತೆಯಾಟವಾಡಿದರು. ವೈಯಕ್ತಿಕವಾಗಿ 29 ಎಸೆತಗಳನ್ನು ಎದುರಿಸಿ 26 ರನ್ ಗಳನ್ನು ಹೊಡೆದ ಅವರು 3 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿದರು.
ಕಿವೀಸ್ ವೇಗಿ ಕೈಲ್ ಜೇಮಿಸನ್ ಎಸೆದ ಎಸೆತವನ್ನು ಲಾಂಗ್ ಆನ್ ಕಡೆಗೆ ಬಾರಿಸಿ ರೋಹಿತ್ ಶರ್ಮಾ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದ 650ನೇ ಸಿಕ್ಸರ್ ದಾಖಲಿಸಿದರು. ಈ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಯಾರೂ ತಲುಪದ ಎತ್ತರಕ್ಕೆ ಅವರು ಏರಿದ್ದಾರೆ.
ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರ ಬಳಿಕ ಕ್ರಿಸ್ ಗೇಲ್ (553), ಶಾಹಿದ್ ಅಫ್ರಿದಿ (476), ಬ್ರೆಂಡನ್ ಮೆಕಲಮ್ (398) ಮತ್ತು ಮಾರ್ಟಿನ್ ಗಪ್ಟಿಲ್ (383) ಅವರಿದ್ದಾರೆ.
ರೋಹಿತ್ ಶರ್ಮಾ ಅವರು ಏಕದಿನ ಪಂದ್ಯಗಳಲ್ಲಿ ಅವರು 357 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದು ಈ ಮಾದರಿಯಲ್ಲಿ ಸಾರ್ವಕಾಲಿಕ ದಾಖಲೆಯಾಗಿದೆ. ಇನ್ನು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 205 ಸಿಕ್ಸರ್ ಬಾರಿಸಿದ್ದಾರೆ. ಈ ಮಾದರಿಯಲ್ಲಿ 200 ಸಿಕ್ಸರ್‌ಗಳ ಗಡಿ ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ರೋಹಿತ್ ಪಾತ್ರರಾಗಿದ್ದಾರೆ. ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅವರು 88 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

