ಹೊಸದಿಗಂತ ವರದಿ ರಾಮನಗರ :
ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿ, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ತನ್ನ ಪ್ರವೃತ್ತಿಯನ್ನು ಮುಂದುವರೆಸಿರುವ ರೌಡಿ ಕೆ.ಚಂದ್ರಶೇಖರ್ ಅಲಿಯಾಸ್ ಚಂದ್ರನನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಕೃತ್ಯಗಳಾದ ಕೊಲೆ, ಕೊಲೆಗೆ ಯತ್ನ, ಡಕಾಯಿತಿ ಮತ್ತು ಹಲ್ಲೆಯಂತಹ ಪ್ರಕರಣಗಳಲ್ಲಿ ರೌಡಿ ಚಂದ್ರ ದಸ್ತಗಿರಿಯಾಗಿದ್ದನು. ಆ ನಂತರ, ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದನು. ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿ, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ತನ್ನ ಪ್ರವೃತ್ತಿಯನ್ನು ಮುಂದುವರೆಸಿದ್ದು. ಆತನ ದುರ್ವರ್ತನೆಯನ್ನು ನಿಯಂತ್ರಣದಲ್ಲಿ ಇಡಲು, ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಗಡಿಪಾರು ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಈ ಸಂಬಂಧವಾಗಿ ಗಡಿಪಾರು ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿ, ರೌಡಿ ಚಂದ್ರಶೇಖರ್ ಅಲಿಯಾಸ್ ಚಂದ್ರನನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಬೆಂಗಳೂರು ನಗರ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ರೌಡಿ ಚಂದ್ರನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ 2 ಹಾಗೂ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಕಾನೂನು ಬಾಹಿರ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರಿಗೆ ಇದು ಎಚ್ಚರಿಕೆ. ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.



