Monday, August 8, 2022

Latest Posts

ಲಸಿಕೆ ಖರೀದಿಗೆ ಕಾಂಗ್ರೆಸ್ ಶಾಸಕರ ನಿಧಿಯಿಂದ 100 ಕೋಟಿ ರೂ. ನೆರವು: ಸಿದ್ದರಾಮಯ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಾಂಗ್ರೆಸ್ ಪಕ್ಷದ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ. 1 ಕೋಟಿಯಂತೆ ಒಟ್ಟು ರೂ. 100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ದೇಶದ ಪ್ರತಿಯೊಬ್ಬರಿಗೂ ಕೊರೋನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದಿದ್ದಾರೆ.

ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಜನ ವ್ಯಾಕ್ಸಿನ್ ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕೊರೋನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ ಎಂದಿದ್ದಾರೆ

ಕೊವಿಶೀಲ್ಡ್ ವ್ಯಾಕ್ಸಿನ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪದೇ ಪದೇ ತನ್ನ ಮಾರ್ಗಸೂಚಿಯನ್ನು ಬದಲಾವಣೆ ಮಾಡುತ್ತಿದೆ. ಮೊದಲ ಹಾಗೂ ಎರಡನೇ ಡೋಸ್ ನಡುವಿನ ಅಂತರ 6-8 ವಾರ ಎಂದು ಈ ಹಿಂದೆ ಹೇಳಿತ್ತು, ಈಗ ಅದನ್ನು 12 ರಿಂದ 16 ವಾರಗಳಿಗೆ ಏರಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದು ಟಾಂಗ್ ನೀಡಿದ್ದಾರೆ.

ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇ ಪದೇ ಬದಲಾವಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್ ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಕೇಂದ್ರ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss