ಹೊಸದಿಗಂತ ಬೆಳಗಾವಿ:
ಕರ್ನಾಟಕ ಮತ್ತು ಗೋವಾ ಗಡಿಭಾಗದ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಸುಮಾರು 400 ಕೋಟಿ ರೂಪಾಯಿಗಳ ಭಾರಿ ದರೋಡೆ ನಡೆದಿದೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜನವರಿ 6ರಂದು ಬೆಳಗಾವಿ ಪೊಲೀಸರಿಗೆ ಅಧಿಕೃತ ಪತ್ರ ಬರೆದಿದ್ದಾರೆ ಎಂದು ಬೆಳಗಾವಿ ಎಸ್ಪಿ ಕೆ. ರಾಮರಾಜನ್ ತಿಳಿಸಿದ್ದಾರೆ.
ನಾಸಿಕ್ ಪೊಲೀಸರು ನೀಡಿರುವ ಮಾಹಿತಿಯಂತೆ, ಅಕ್ಟೋಬರ್ 16ರಂದು ಚೋರ್ಲಾ ಘಾಟ್ ಪ್ರದೇಶದಲ್ಲಿ ಭಾರಿ ಮೊತ್ತದ ಹಣದ ಅಪಹರಣ ನಡೆದಿದೆ. ಇದರ ಮುಂದುವರಿದ ಭಾಗವಾಗಿ, ಅಕ್ಟೋಬರ್ 22ರಂದು ನಾಸಿಕ್‌ನಲ್ಲಿ ಸಂದೀಪ್ ಪಾಟೀಲ್ ಎಂಬುವವರನ್ನು ಅಪಹರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯ ಗಂಭೀರತೆಯನ್ನು ಪರಿಗಣಿಸಿ ಬೆಳಗಾವಿ ಪೊಲೀಸರು ಈ ಕೆಳಗಿನ ಕ್ರಮಗಳನ್ನು ಕೈಗೊಂಡಿದ್ದಾರೆ:
ಖಾನಾಪುರ ಉಪನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡವನ್ನು ಈಗಾಗಲೇ ಸ್ಥಳಕ್ಕೆ ಕಳುಹಿಸಿ ಪ್ರಾಥಮಿಕ ತನಿಖೆ ನಡೆಸಲಾಗಿದೆ.
ಈ ಪ್ರಕರಣದ ಆಳವಾದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ.
ಮಹಾರಾಷ್ಟ್ರ ಪೊಲೀಸರು ಸದ್ಯ ಪ್ರಕರಣದ ತನಿಖೆ ನಡೆಸುತ್ತಿದ್ದು, ಕರ್ನಾಟಕ ಪೊಲೀಸರು ಅವರಿಗೆ ಅಗತ್ಯವಿರುವ ಎಲ್ಲಾ ತಾಂತ್ರಿಕ ಮತ್ತು ಸ್ಥಳೀಯ ಸಹಕಾರ ನೀಡುತ್ತಿದ್ದಾರೆ.
ಚೋರ್ಲಾ ಘಾಟ್ ಪ್ರದೇಶವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಗಡಿಭಾಗವಾಗಿರುವುದರಿಂದ, ಭದ್ರತೆಯ ದೃಷ್ಟಿಯಿಂದ ಶೀಘ್ರದಲ್ಲೇ ಅಲ್ಲಿ ಹೈ-ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಎಸ್ಪಿ ಕೆ. ರಾಮರಾಜನ್ ಭರವಸೆ ನೀಡಿದ್ದಾರೆ.



