ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ನಾಗಪುರದ ಸ್ವಯಂ ಸೇವಕ ಸಂಘದ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ನೀಡಿದ ಹೇಳಿಕೆಗಳ ಕುರಿತಾಗಿ ಆರ್‌ಎಸ್‌ಎಸ್ ಸ್ಪಷ್ಟನೆ ನೀಡಿದೆ.
ಈ ಕುರಿತು ಆರ್‌ಎಸ್‌ಎಸ್ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯಿಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲ ಆರೋಪ ಎಂದು ಹೇಳಿದೆ.
ಆರ್‌ಎಸ್‌ಎಸ್‌ನ ಯಾವುದೇ ಕಛೇರಿಯಲ್ಲಾಗಲಿ ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ, ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ ಎಂದು ತಿಳಿಸಿದೆ.
ಅದಾಗ್ಯೂ ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳ ಮೊದಲೇ ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಅನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ʼಅವಮಾನʼದ ಬಗ್ಗೆ ಹೇಳಿರಲಿಲ್ಲ. ಹತ್ತು ತಿಂಗಳ ಬಳಿಕ ಹೇಳಿಕೆ ನೀಡಿರುವುದು ಆಶ್ಚರ್ಯ ತಂದಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.