ಸಂಪುಟದಿಂದ ಸಚಿವ ನಾಗೇಂದ್ರರನ್ನು ವಜಾ ಮಾಡಿ: ಶಾಸಕ ಚನ್ನಬಸಪ್ಪ ಆಗ್ರಹ

ಹೊಸದಿಗಂತ ವರದಿ,ಶಿವಮೊಗ್ಗ:

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187.33 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಶಿವಮೊಗ್ಗದ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಸೂಪರಿಡೆಂಟ್ ಆಗಿದ್ದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 6 ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ಭ್ರಷ್ಟಾಚಾರದ ಎಲ್ಲಾ ಮಾಹಿತಿ ಇದೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡುವುದೇ ಕಷ್ಟವಾಗಿದೆ. ಹೀಗೇ ಮುಂದುವರೆದರೆ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಕಾಲ ದೂರವಿಲ್ಲ. ಇದು ಸಾವಿನ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಂದ್ರಶೇಖರ್ ಅವರಿಗೆ ವಾಲ್ಮೀಕಿ ನಿಗಮದಲ್ಲಿದ್ದ ಸುಮಾರು 187.33 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳು ಒತ್ತಡ ಹಾಕುತ್ತಿದ್ದರು. ಹೀಗಾಗಿ ಅವರು ಬೇರೆ ಬೇರೆ ದಿನಾಂಕಗಳಲ್ಲಿ ಬೇರೆ ಬೇರೆ ಖಾತೆೆಗಳಿಗೆ ಸುಮಾರು 177.35 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಲು ಸಚಿವರೊಬ್ಬರಿಂದ ಮೌಖಿಕ ಆದೇಶ ಬಂದಿತ್ತು ಎಂದು ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!