ಸಾಹಿತ್ಯ ಸಮ್ಮೇಳನ: ಬಹಿರಂಗ ಅಧಿವೇಶನದಲ್ಲಿ ಕೈಗೊಂಡ ನಿರ್ಣಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಾವೇರಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸರ್ವಾನುಮತದಿಂದ ಹಲವಾರು ನಿರ್ಣಯಗಳನ್ನು ಕೈಗೊಂಡಿದೆ.

ಕನ್ನಡ ಸಮಗ್ರ ಭಾಷೆ ಅಭಿವೃದ್ಧಿ ವಿಧೇಯಕ ಕೂಡಲೇ ಸುಗ್ರೀವಾಜ್ಞೆ ಮೂಲಕ ಕಾನೂನಿನ ರೂಪ ಪಡೆದು ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು ಎಂದು ಸಮ್ಮೇಳನವು ರಾಜ್ಯ ಸರ್ಕಾರವನ್ನು ಬಲವಾಗಿ ಆಗ್ರಹಿಸುತ್ತದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಇರುವ ಮಹಾಜನ ವರದಿಯು, ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿತವಾಗಿ ಪ್ರಕರಣ ವಿಚಾರಣೆಯ ಹಂತದಲ್ಲಿ ಇರುವುದರಿಂದ, ನ್ಯಾಯಾಲಯದ ಅಂತಿಮ ತೀರ್ಪಿನ ಮಾರ್ಗದರ್ಶನದಂತೆ ಸೂಕ್ತ ಕ್ರಮವನ್ನು ವಿಳಂಬವಿಲ್ಲದೇ ಕೈಗೊಳ್ಳಬೇಕು ಎಂದು ಸಮ್ಮೇಳನವು ಸರ್ಕಾರವನ್ನು ಆಗ್ರಹಿಸುತ್ತದೆ.

ಕನ್ನಡಕ್ಕಾಗಿ ಹೋರಾಡಿದ ಕನ್ನಡ ಚಳವಳಿಗಾರರ ಮೇಲಿನ ಈ ಸಂಬಂಧಿತ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಕೂಡಲೆ ಹಿಂದಕ್ಕೆ ಪಡೆಯಬೇಕು ಎಂದು ಸಮ್ಮೇಳನ ಆಗ್ರಹಿಸುತ್ತದೆ.

ಭಾರತ ಸಂವಿಧಾನದ ಎಂಟನೇ ಪರಿಚ್ಛೇದದ ಅನ್ವಯ ಎಲ್ಲಾ ಪ್ರಾಂತೀಯ ಭಾಷೆಗಳನ್ನು ಸಮಾನ ಎಂದು ಗುರುತಿಸಿದ್ದು, ಈ ಪಟ್ಟಿಯಲ್ಲಿರುವ 22 ಭಾಷೆಗಳಲ್ಲಿರುವ ಕನ್ನಡ ಕರ್ನಾಟಕದ ಸಾರ್ವಭೌಮ ಭಾಷೆಯಾಗಿದೆ. ಇದರ ಮೇಲಿನ ಹಿಂದಿ ಅಥವಾ ಇನ್ಯಾವುದೇ ಭಾಷೆಯ ಆಕ್ರಮಣ, ಹೇರಿಕೆ ಈ ಸಮ್ಮೇಳನ ತೀವ್ರವಾಗಿ ಖಂಡಿಸುತ್ತದೆ.

ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಜರುಗಿಸಬೇಕೆನ್ನುವ ನಿರ್ಣಯವನ್ನು ಕರ್ನಾಟಕ ತೆಗೆದುಕೊಂಡಿರುವುದರಿಂದ ಅದರ ಅರ್ಥಪೂರ್ಣ ಮತ್ತು ಯಶಸ್ವಿ ಆಯೋಜನೆಯ ಸಂಬಂಧದಲ್ಲಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಜರುಗಿಸುತ್ತಾ ಬಂದಿರುವ ಅನುಭವದ ಹಿನ್ನೆಲೆಯನ್ನು ಹೊಂದಿರುವ, ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಜರುಗಿಸಬೇಕೆಂದು ಮತ್ತು ನಿಯೋಜಿತ ಸಮ್ಮೇಳನದ ಸಂಬಂಧವಾಗಿ ಸರ್ಕಾರ ಜರುಗಿಸುವ ಸಭೆಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಈ ಸಮ್ಮೇಳನವು ಒಕ್ಕೋರಲಿನಿಂದ ಸರ್ಕಾರವನ್ನು ಆಗ್ರಹಿಸುತ್ತದೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಆಡಳಿತ ಹಾಗೂ ಎಲ್ಲ ಕಾರ್ಯಕರ್ತರಿಗೂ ಮತ್ತು ಆತಿಥ್ಯವನ್ನು ನೀಡಿದ ಪ್ರೀತಿತೋರಿದ ಹಾವೇರಿಯ ಸಮಸ್ತ ಜನತೆಗೂ ಈ ಮಹಾಸಭೆಯು ಹೃತ್ತೂರ್ವಕ ಧನ್ಯವಾದಗಳನ್ನು ಹಾಗೂ ಕೃತಜ್ಞತೆಗಳನ್ನು ಅರ್ಪಿಸುತ್ತದೆ ಎನ್ನುವ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಬಹಿರಂಗ ಸಭೆಯು ಡಾ.ವಿ.ಕೃ.ಗೋಕಾಕ ಮಹಾಮಂಟಪದಲ್ಲಿ ‘ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ’ಯಲ್ಲಿ ನಡೆಯಿತು. ಪ್ರಸ್ತುತ ಸಮ್ಮೇಳನವು ತೆಗೆದುಕೊಂಡ ಮೇಲಿನ ಈ ನಿರ್ಣಯಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರ-ಸಹಯೋಗದೊಂದಿಗೆ ಅನುಷ್ಠಾನಗೊಳಿಸಬೇಕೆಂದು ಸರ್ಕಾರವನ್ನು ಈ ಸಮ್ಮೇಳನವು ಆಗ್ರಹಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!