ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್ 24 ರಿಂದ ಕರ್ನಾಟಕ ರಸ್ತೆ ಸಾರಿಗೆ ಅನಿರ್ಧಿಷ್ಟಾವಧಿ ಮುಷ್ಕರಕ್ಕ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರು ಹಾಗೂ ಸಿಬ್ಬಂದಿಗಳು ವೇತನಕ್ಕೆ ಆಗ್ರಹಿಸಿ ಮಾ.24ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ತೀರ್ಮಾನಿಸಿದ್ದಾರೆ.

ಸಾರಿಗೆ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೆ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಲಿದೆ.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. 2016ರಿಂದ ನಮ್ಮ ನೌಕರರಿಗೆ ವೇತನ ಹೆಚ್ಚಳವಾಗಿಲ್ಲ, 2021ರಲ್ಲಿ ನಡೆದ ಮುಷ್ಕರದ ವೇಳೆ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ವೇತನ ಪರಿಷ್ಕರಣೆ ಮಾಡುವುದಾಗಿ ಲಿಖಿತ ಭರವಸೆ ನೀಡಿ ನಮ್ಮ ಇತರೆ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದರು. ಆದರೆ, ಎಲ್ಲಾ ಭರವಸೆಗಳು ಕಾಗದದಲ್ಲಿಯೇ ಉಳಿದಿವೆ ಮತ್ತು ನಮ್ಮ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾರ್ಚ್ 24 ರಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ನಮ್ಮ ವೇತನ ಹೆಚ್ಚಳ ಮತ್ತು 2021 ರ ಪ್ರತಿಭಟನೆಯಲ್ಲಿ ಭಾಗವಹಿಸಿ ವಜಾಗೊಂಡ ನೌಕರರನ್ನು ಹಿಂಪಡೆಯುವುದು, ನೌಕರರು ಮತ್ತು ಇತರರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಕದಲುವುದಿಲ್ಲ ಎಂದು ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!