ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದಲ್ಲಿ ಮೂರನೇ ಬಾರಿ ಗೆದ್ದು ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದ್ದು, ಈಗಾಗಲೇ ಬಿಜೆಪಿ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿತ್ತು. ಹೀಗಾಗಿ, ಈ ಚುನಾವಣೆಯ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ನಯಾಬ್ ಸಿಂಗ್ ಸೈನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಹರಿಯಾಣದಲ್ಲಿ ಸ್ಪಷ್ಟ ಬಹುಮತ ನೀಡುವ ಮೂಲಕ ಮತ್ತೆ ಸರ್ಕಾರ ರಚಿಸಲು ಅವಕಾಶ ನೀಡಿದ ಜನತೆಗೆ ಸೆಲ್ಯೂಟ್ ಎಂದಿದ್ದಾರೆ.
ಹರಿಯಾಣದಲ್ಲಿ ಬಿಜೆಪಿಯ ಸತತ ಮೂರನೇ ಅವಧಿಯ ದಾಖಲೆಯು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯಕ್ಕೆ ಸಿಕ್ಕ ವಿಜಯವಾಗಿದೆ ಎಂದು ಮೋದಿ ಹೇಳಿದ್ದಾರೆ. ಹರಿಯಾಣದಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು, 90 ಸದಸ್ಯ ಬಲದ ವಿಧಾನಸಭೆಯಲ್ಲಿ ಅರ್ಧದಷ್ಟು ಸಂಖ್ಯೆಯನ್ನು ದಾಟಿದೆ. ಇನ್ನೂ ಒಂದು ಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ಘೋಷಿಸಿದ ನಂತರ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು.
ಈ ಗೆಲುವಿಗಾಗಿ ಪ್ರಧಾನಮಂತ್ರಿ ಮೋದಿ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಿದರು. ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲು ಕಾರ್ಯಕರ್ತರ ಶ್ರಮ ಕಾರಣ ಎಂದು ಹೇಳಿದರು. “ಈ ಮಹಾನ್ ಗೆಲುವಿಗಾಗಿ ಅವಿರತವಾಗಿ ಮತ್ತು ಸಂಪೂರ್ಣ ಸಮರ್ಪಣಾಭಾವದಿಂದ ದುಡಿದ ನನ್ನ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ನೀವು ರಾಜ್ಯದ ಜನರಿಗೆ ಪೂರ್ಣವಾಗಿ ಸೇವೆ ಸಲ್ಲಿಸಿದ್ದಲ್ಲದೆ, ನಮ್ಮ ಅಭಿವೃದ್ಧಿಯ ಕಾರ್ಯಸೂಚಿಯನ್ನು ಅವರ ಬಳಿಗೆ ಕೊಂಡೊಯ್ದಿದ್ದೀರಿ. ಈ ಮೂಲಕ ಹರಿಯಾಣದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.