Thursday, July 7, 2022

Latest Posts

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ದಶವರ್ಷದ ಸಂಭ್ರಮ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ದಶವರ್ಷ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಆ.27 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೆಳಗಿನ ಗೌಡ ಸಮಾಜ ಸಭಾಂಗಣದಲ್ಲಿ ದಶ ಸಂಭ್ರಮವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಲಿದ್ದು, ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್.ಅಂಗಾರ ಆಶಯ ಮಾತುಗಳನ್ನಾಡಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಕೊಂಬಾರನ ಜಿ.ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ.
ಅತಿಥಿಗಳಾಗಿ ಅಕಾಡೆಮಿಯ ಮಾಜಿ ಅಧ್ಯಕ್ಷರುಗಳಾದ ಎನ್.ಎಸ್.ದೇವಿಪ್ರಸಾದ್, ಕೊಲ್ಯದ ಗಿರೀಶ್ ಮತ್ತು ಪಿ.ಸಿ.ಜಯರಾಮ, ಅರೆಭಾಷೆ ಸಮಾಜದ ಮುಖಂಡರಾದ ಸೂರ್ತಲೆ ಆರ್.ಸೋಮಣ್ಣ, ಪೇರಿಯನ ಜಯಾನಂದ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಅರೆಭಾಷೆ ಡಿಜಿಟಲ್ ಪುಸ್ತಕಗಳ ಬಿಡುಗಡೆ, ಸಾಕ್ಷ್ಯಚಿತ್ರಗಳ ಬಿಡುಗಡೆ, ಅರೆಭಾಷೆ ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ ಸಿ.ಡಿ ಬಿಡುಗಡೆ, ವಾದ್ಯ ಪರಿಕರ ವಿತರಣೆ, ಕಥೆ ಕವಿತೆ, ಲಲಿತ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಅರೆಭಾಷೆ ಅಕಾಡೆಮಿಯ ವೆಬ್‌ಸೈಟ್ ಗೆ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಅರೆಭಾಷೆ ಜನಾಂಗ ಬಾಂಧವರ ಸತತ ಪರಿಶ್ರಮದ ಫಲವಾಗಿ 2011 ಡಿಸೆಂಬರ್ 15 ರಂದು ಜನ್ಮ ತಾಳಿತು. ಇದಕ್ಕೆ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಕೊಂಬಾರನ ಜಿ.ಬೋಪಯ್ಯ ಅವರುಗಳನ್ನು ಸ್ಮರಿಸಿಕೊಳ್ಳುವುದಾಗಿ ಲಕ್ಷ್ಮಿನಾರಾಯಣ ಕಜೆಗದ್ದೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಚೊಕ್ಕಾಡಿ ಪ್ರೇಮಾ ರಾಘವಯ್ಯ, ಧನಂಜಯ ಅಗೋಳಿಕಜೆ ಹಾಗೂ ಡಾ.ದಯಾನಂದ ಕೂಡಕಂಡಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss