August 3, 2026
Monday, August 3, 2026
spot_img

ಬಸವಕಲ್ಯಾಣ ಸಮಾವೇಶಕ್ಕೆ ಅನುಮತಿ ಸಿಗದಿದ್ದರೆ ದೆಹಲಿಯಲ್ಲಿ ಸತ್ಯಾಗ್ರಹ: ಗುರುನಾಥ ವಡ್ಡೆ ಎಚ್ಚರಿಕೆ

ಹೊಸದಿಗಂತ ವರದಿ ಬೀದರ್:

ಬಸವಕಲ್ಯಾಣದಲ್ಲಿ ಜೂನ್ 28 ರಂದು ನಡೆಯಲಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಅನುಮತಿ ನೀಡದಿದ್ದಲ್ಲಿ ಸರ್ಕಾರದ ಅಘೋಷಿತ ತುರ್ತು ಪರಿಸ್ಥಿತಿಯನ್ನು ಖಂಡಿಸಿ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಸತ್ಯಾಗ್ರಹ ನಡೆಸುವುದಾಗಿ ಸಮಾಜಸೇವಕ ಗುರುನಾಥ ವಡ್ಡೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ, ಬಸವಕಲ್ಯಾಣ ತಾಲೂಕು ಆಡಳಿತವು ಸಮಾವೇಶಕ್ಕೆ ಅನುಮತಿ ನಿರಾಕರಿಸಿರುವುದು ಭಾರತೀಯ ಸಂವಿಧಾನದ ಅನುಚ್ಛೇದ 19(1)(ಎ), 19(1)(ಬಿ) ಹಾಗೂ 25(1)ರಲ್ಲಿ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ಸಮಾವೇಶಕ್ಕೆ ಅನುಮತಿ ನಿರಾಕರಿಸಿರುವ ಕ್ರಮವು ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಈ ನಿರ್ಧಾರದ ಹಿಂದೆ ತಾಲೂಕು ಆಡಳಿತದ ದುರುದ್ದೇಶ ಅಡಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ:

ಈ ಸಂಬಂಧ ಈಗಾಗಲೇ ನ್ಯಾಯಾಂಗ ತನಿಖೆ ನಡೆಸುವಂತೆ ಜೂನ್ 17 ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ಗುರುನಾಥ ವಡ್ಡೆ ತಿಳಿಸಿದ್ದಾರೆ.

ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ತಕ್ಷಣ ಅನುಮತಿ ನೀಡಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ರಾಷ್ಟ್ರ ರಾಜಧಾನಿ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !