ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಇದರ ವಿರುದ್ಧ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಂಗಳವಾರ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ನಡೆಯುವ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ.
ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ ನಡೆಸುವ ಮೂಲಕ ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ.
“ವರ್ಷಕ್ಕೆ ಸುಮಾರು 6 ಸಾವಿರ ಕೋಟಿ ರೂಪಾಯಿಗಳಷ್ಟು ಕೆಲಸ ನಡೆಯುತ್ತಿದ್ದ ಯೋಜನೆಯನ್ನು ಹೊಸ ಕಾನೂನುಗಳ ಮೂಲಕ ಹತ್ತಿಕ್ಕಲಾಗುತ್ತಿದೆ. ಇದು ಸಂಪೂರ್ಣವಾಗಿ ಜನವಿರೋಧಿ ಮತ್ತು ಬಡವರ ವಿರೋಧಿ ನೀತಿ,” ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಜಾರಿಗೆ ಬಂದ ಈ ಐತಿಹಾಸಿಕ ಯೋಜನೆಯನ್ನು ಉಳಿಸಿಕೊಳ್ಳುವುದು ಮತ್ತು ಗ್ರಾಮೀಣಾಭಿವೃದ್ಧಿಗೆ ಮರುಜೀವ ನೀಡುವುದು ಈ ಹೋರಾಟದ ಮೂಲ ಉದ್ದೇಶವಾಗಿದೆ.




