ಹಿಜಾಬ್‌ ನಿಷೇಧ ಪ್ರಕರಣ : ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆಗೆ ಮುಂದಾದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಯನ್ನು ಕೈಗೆತ್ತಿಕೊಳ್ಳಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

ವಿದ್ಯಾರ್ಥಿಗಳ ಪರವಾಗಿ ಹಿರಿಯ ವಕೀಲ ಮೀನಾಕ್ಷಿ ಅರೋರಾ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು. ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಹುಡುಗಿಯರಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅನುಮತಿ ಕೋರಿ ಮಧ್ಯಂತರ ಅರ್ಜಿಯನ್ನು ಪ್ರಸ್ತಾಪಿಸಿದರು.‌

ವಿಭಜಿತ ತೀರ್ಪಿನ ನಂತರ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಿಗೆ ತೆರಳಿದ್ದಾರೆ, ಆದರೆ ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಹಾಗಾಗಿ ಫೆಬ್ರವರಿ 6 ರಿಂದ ಆರಂಭವಾಗುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅವರಿಗೆ ಅನುಮತಿ ನೀಡಬೇಕು ಎಂದು ವಕೀಲರು ಹೇಳಿದರು.

ಇದನ್ನು ಆಲಿಸಿದ ಸಿಜೆಐ, ನ್ಯಾಯಾಲಯವು ಅದನ್ನು ಪರಿಶೀಲಿಸಿ ತುರ್ತು ವಿಚಾರಣೆಗೆ ಪಟ್ಟಿ ಮಾಡಲಿದೆ ಎಂದು ಹೇಳಿದರು. ಪ್ರಕರಣಕ್ಕಾಗಿ ನಾನು ತ್ರಿಸದಸ್ಯ ಪೀಠವನ್ನು ರಚಿಸುತ್ತೇನೆ ಎಂದು ಅವರು ತಿಳಿಸಿದರು.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗಳ ಮೇಲಿನ ನಿಷೇಧವನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಅಕ್ಟೋಬರ್ 2022 ರಲ್ಲಿ ವಿಭಜಿತ ತೀರ್ಪು ನೀಡಿತ್ತು. ಆದರೆ ಈವರೆಗೆ ಪೀಠ ರಚನೆ ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಪ್ರಕರಣವನ್ನು ತ್ವರಿತ ವಿಚಾರಣೆಗೆ ಮತ್ತೆ ಸುಪ್ರೀಂ ಮುಂದೆ ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!