October 13, 2026
Tuesday, October 13, 2026
spot_img

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರಿಗೆ ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆ ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಭಾರೀ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕರಾವಳಿ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಗರಿಷ್ಠ 7 ಸೆಂಟಿಮೀಟರ್ ಮಳೆಯಾಗಿದೆ. ಉಳಿದಂತೆ ಹಾವೇರಿ – 5 ಸೆಂ.ಮೀ, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರ – ತಲಾ 4 ಸೆಂ.ಮೀ ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಶೃಂಗೇರಿ, ಭಾಗಮಂಡಲ – ತಲಾ 3 ಸೆಂ.ಮೀ ಮಳೆಯಾಗಿದೆ.

ಅರಬ್ಬೀ ಸಮುದ್ರದಲ್ಲಿ ಹವಾಮಾನ ಅಸ್ಥಿರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಸಮುದ್ರ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ:

ಮೀನುಗಾರರಿಗೆ ಕಟ್ಟುನಿಟ್ಟಿನ ಸೂಚನೆ

ಭಾರತೀಯ ಹವಾಮಾನ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸ್ಪಷ್ಟ ಸೂಚನೆ ನೀಡಿದೆ. ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಾಗುವುದರಿಂದ ಸಣ್ಣ ದೋಣಿಗಳು ಮತ್ತು ಮೀನುಗಾರಿಕಾ ಬೋಟ್‌ಗಳಿಗೆ ಅಪಾಯ ಎದುರಾಗಬಹುದು ಎಂದು ಎಚ್ಚರಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರಿಕಾ ಬಂದರುಗಳು ಮತ್ತು ಸ್ಥಳೀಯ ಆಡಳಿತಕ್ಕೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬೆಂಗಳೂರು ಸೇರಿ ಒಳನಾಡಿನಲ್ಲಿ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ನಗರದಲ್ಲಿ ಗರಿಷ್ಠ 33 ಡಿಗ್ರಿ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read