ಹೊಸದಿಗಂತ ಯಾದಗಿರಿ:
ಜಿಲ್ಲೆಯ ಗುರಮಠಕಲ್ ಪಟ್ಟಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಶುಕ್ರವಾರ ಸಂಭವಿಸಿದೆ.
ಪಟ್ಟಣದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಾಸವಿದ್ದ 19 ವರ್ಷದ ಸ್ವಾತಿರಡ್ಡಿ ಎಂಬಾಕೆಯೇ ಮೃತಪಟ್ಟ ದುರ್ದೈವಿ. ಈಕೆ ತನ್ನ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹಾಸ್ಟೆಲ್ ಆವರಣದಲ್ಲಿ ಶೋಕದ ಛಾಯೆ ಆವರಿಸಿದೆ.
ಕಳೆದ ನಾಲ್ಕು ತಿಂಗಳ ಹಿಂದಷ್ಟೇ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇನ್ನು ಹಸಿರಾಗಿರುವಾಗಲೇ, ಜಿಲ್ಲೆಯಲ್ಲಿ ಮತ್ತೊಂದು ಅತೀ ಎಳೆಯ ವಯಸ್ಸಿನ ಜೀವ ಬಲಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುರಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



