ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ (ಡಿಸೆಂಬರ್ 14) ಸಂಜೆ ನಿಧನರಾದರು.
ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು, ವಿವಿಧ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಈ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ʼʼಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ಗೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆʼʼ ಎಂದಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ʻನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಶಾಮನೂರ ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ʼʼಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು. ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ ಕಾರ್ಯನಿರ್ವಹಿಸಿದ್ದರು. ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಮತ್ತು ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ. ಅವರ ಅಗಲಿಕೆಯ ದುಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರ ಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆʼʼ ಎಂದು ಹೇಳಿದ್ದಾರೆ.
ಮುಖಂಡರಾದ ನಿಖಿಲ್ ಕುಮಾರಸ್ವಾಮಿ, ಗೋವಿಂದ ಎಂ. ಕಾರಜೋಳ, ಎಚ್.ಎಂ. ರೇವಣ್ಣ, ಸಾಗರ್ ಖಂಡ್ರೆ, ಈಶ್ವರ್ ಖಂಡ್ರೆ, ಆರ್. ಅಶೋಕ್, ಸಿ.ಟಿ. ರವಿ, ಎನ್.ಎಸ್. ಬೀಸರಾಜು ಮತ್ತಿತರರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

