ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ಡಾ. ರಾಮರಾವ್ ಸಖಾರಾಮ್ ವಾಡ್ಕುಟೆ (72) ಅವರು ಶನಿವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನವೆಂಬರ್ 20ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ವೈದ್ಯರ ನಿರಂತರ ಚಿಕಿತ್ಸೆಯ ನಡುವೆಯೂ ರಾತ್ರಿ 11:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸರಳ ವ್ಯಕ್ತಿತ್ವದ ಜನನಾಯಕ
ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಪರ್ಭಾನಿ ಮೂಲದವರಾದ ರಾಮರಾವ್ ವಾಡ್ಕುಟೆ ಅವರು ಇದೇ ಏಪ್ರಿಲ್‌ನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು 2014ರ ಜೂನ್‌ನಿಂದ 2019ರ ಅಕ್ಟೋಬರ್‌ವರೆಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಹಿಂಗೋಲಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು, ಧಂಗರ್ ಸಮುದಾಯದ ಏಳಿಗೆಗಾಗಿ ಶ್ರಮಿಸಿದ್ದರು. ಅಲ್ಲದೆ, ಕುರಿ ಮತ್ತು ಮೇಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಾಗೂ ಸಹಕಾರಿ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು.
ಗಣ್ಯರ ಕಂಬನಿ
ವಾಡ್ಕುಟೆ ಅವರ ನಿಧನಕ್ಕೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ತೀವ್ರ ಸಂತಾಪ ಸೂಚಿಸಿದ್ದಾರೆ. “ತಳಮಟ್ಟದ ಜನರ ಕಲ್ಯಾಣಕ್ಕೆ ಬದ್ಧರಾಗಿದ್ದ ಸರಳ ಹಾಗೂ ಸಮರ್ಪಣಾ ಮನೋಭಾವದ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಸಿಎಂ ಫಡ್ನವಿಸ್ ಭಾವುಕರಾಗಿದ್ದಾರೆ.
ಮಂಗಳವಾರ ಅಂತ್ಯಕ್ರಿಯೆ
ಸೋಮವಾರ ಪರ್ಭಾನಿಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುವುದು. ಬಳಿಕ ಮಂಗಳವಾರ ಹಿಂಗೋಲಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.



