August 16, 2026
Sunday, August 16, 2026
spot_img

ಕೊಡಗಿಗೆ ಪ್ರತ್ಯೇಕ ಯೋಜನೆ ಘೋಷಣೆ; ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ: ಸಿಎಂ ಭರವಸೆ

ಹೊಸದಿಗಂತ ವರದಿ ಮಡಿಕೇರಿ:

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಡಿಕೇರಿಯಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಇದೇ ವೇಳೆ ತಮ್ಮ ಅಧಿಕಾರಾವಧಿಯಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ ಯೋಜನೆ ಜಾರಿಗೆ ಬದ್ಧನಿರುವುದಾಗಿ ಅವರು ಭರವಸೆ ನೀಡಿದರು.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಶಾಸಕ ಡಾ.ಮಂಥರ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಡೊಳ್ಳು ಕುಣಿತದೊಂದಿಗೆ ಹಾಗೂ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಿಎಂ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.

ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ಕೊಡಗಿನಲ್ಲಿ ಪಕ್ಷವನ್ನು ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ತಮ್ಮನ್ನು ಹಾಗೂ ಶಾಸಕರನ್ನು ಪ್ರತಿನಿಧಿಗಳಾಗಿ ಪರಿಗಣಿಸಿ ಕೊಡಗಿಗೆ ವಿಶೇಷ ಯೋಜನೆ ನೀಡಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದರು.

ಹನೂರು ಗುಂಡಿನ ದಾಳಿ ಪ್ರಕರಣಕ್ಕೆ ನ್ಯಾಯಾಂಗ ತನಿಖೆ

ಭಾಗಮಂಡಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಮೃತಪಟ್ಟ ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು. ಮೃತಪಟ್ಟವರ ಕುಟುಂಬಕ್ಕೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ನೀಡಲಾಗುವುದು ಎಂದರು.

ಇದನ್ನೂ ಓದಿ:

ಮೃತರ ಬಳಿ ಕಾಡುಪ್ರಾಣಿಗಳ ಮಾಂಸವಿದ್ದ ಎರಡು ಚೀಲಗಳು ಹಾಗೂ ಕೋವಿ ದೊರೆತಿರುವುದರಿಂದ ಅವರು ಬೇಟೆಗಾರರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೂ ನ್ಯಾಯಾಂಗ ತನಿಖೆಯ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೊಡಗಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ

ಬಯಲುಸೀಮೆ ಭಾಗದಲ್ಲಿ ಆಹಾರದ ಕೊರತೆಯಿಂದ ವನ್ಯಪ್ರಾಣಿಗಳು ಮಲೆನಾಡಿನತ್ತ ಬರುತ್ತಿದ್ದು, ಕೊಡಗಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮಳೆಯಿಂದ ಹಾನಿ: ವರದಿ ಪಡೆದು ಪರಿಹಾರ

ಅಧಿಕ ಮಳೆಯಿಂದ ಕೊಡಗಿನ ರಸ್ತೆಗಳು ಹಾಳಾಗಿದ್ದು, ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರಿಸ್ಥಿತಿಯ ಕುರಿತು ವರದಿ ಸಂಗ್ರಹಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಹಣಕಾಸು ಇಲಾಖೆಯ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ದಿನಗಳಲ್ಲಿ ವಿಶೇಷ ಪ್ಯಾಕೇಜ್ ಕುರಿತು ಗಮನ ಹರಿಸುವುದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಬಂದಿರುವುದಾಗಿ ಹೇಳಿದ ಅವರು, ರಾಜ್ಯದ ಜಲಾಶಯಗಳು ಭರ್ತಿಯಾಗಲಿ ಹಾಗೂ ನಾಡಿನಲ್ಲಿ ಸಮೃದ್ಧಿ ನೆಲೆಸಲಿ ಎಂದು ಭಾಗಮಂಡಲದ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿರುವುದಾಗಿ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !