ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ವೇಗವಾಗಿ ಬಂದ ಕಾರು ಇತರೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಮೆಹಮೂದಾಬಾದ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಕ್ನೋ ಕಡೆಗೆ ಹೋಗುತ್ತಿದ್ದ ಅತಿವೇಗದ ಕಾರು ಮೊದಲು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ನಂತರ ವಿರುದ್ಧ ದಿಕ್ಕಿನಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡನೇ ಕಾರು ಸಮೀಪದ ಹೊಂಡಕ್ಕೆ ಹಾರಿದೆ.
ಸ್ಥಳೀಯರು ಕೂಡಲೇ ರಕ್ಷಣೆ ಮಾಡಲು ಮುಂದಾದರು. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರೆಲ್ಲರೂ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ಹೋಗುತ್ತಿದ್ದರು.