ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೇಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಪಿಕಪ್ ವಾಹನವೊಂದು ಇತರ ವಾಹನಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.
ಘಟನೆಯ ವಿವರ:
ದೆಹಲಿಯಿಂದ ಜೈಪುರದ ಕಡೆಗೆ ಸಂಚರಿಸುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ವೇಯಲ್ಲಿದ್ದ ಇತರ ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ತಕ್ಷಣ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಇಡೀ ವಾಹನವನ್ನು ಆವರಿಸಿಕೊಂಡಿದೆ. ದುರದೃಷ್ಟವಶಾತ್, ವಾಹನದಲ್ಲಿದ್ದ ಮೂವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಪಿಕಪ್ ವಾಹನದ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ, ಸ್ಥಿತಿ ಅತ್ಯಂತ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಾಲಕನನ್ನು ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ರೇಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

