November 24, 2026
Tuesday, November 24, 2026
spot_img

ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಪವಿತ್ರಾ ಗೌಡಗೆ ನಿರಾಸೆ : ಡಿ. ನಾಲ್ಕಕ್ಕೆ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರಿಗೆ ಮತ್ತೆ ಜಾಮೀನು ವಿಷಯದಲ್ಲಿ ನಿರಾಸೆ ಎದುರಾಗಿದೆ. ಸಹೋದರನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಅವರು ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಡಿಸೆಂಬರ್‌ 4ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಿತು. ಡಿಸೆಂಬರ್‌ 12 ಮತ್ತು 13ರಂದು ತಮ್ಮ ಸಹೋದರನ ವಿವಾಹ ನಿಗದಿಯಾಗಿದ್ದು, ಕುಟುಂಬದ ಪ್ರಮುಖ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ. ಹೀಗಾಗಿ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಮನವಿ ಮಾಡಿದ್ದಾರೆ.

ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಕೀಲರು, ಅರ್ಜಿಯ ಪ್ರತಿಯನ್ನು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ನ್ಯಾಯಾಲಯ, ಅರ್ಜಿಯ ಪ್ರತಿ ಹಾಗೂ ನೋಟಿಸ್‌ ಪಡೆದುಕೊಳ್ಳುವಂತೆ ಎಸ್‌ಪಿಪಿಗೆ ಸೂಚಿಸಿತು. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ನಿಗದಿಪಡಿಸಿತು.

ಈ ಹಿಂದೆ ಸೆಪ್ಟೆಂಬರ್‌ 26ರಂದು ಬೆಂಗಳೂರಿನ 59ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ತಾತ್ಕಾಲಿಕ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದಾಗಿನಿಂದ ಪವಿತ್ರಾ ಗೌಡ ಜಾಮೀನು ಪಡೆಯಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಸೆಷನ್ಸ್‌ ನ್ಯಾಯಾಲಯ, ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಇದುವರೆಗೆ ಏಳುಕ್ಕೂ ಹೆಚ್ಚು ಬಾರಿ ಸಾಮಾನ್ಯ ಮತ್ತು ಮಧ್ಯಂತರ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದಾರೆ.

Must Read